ಮಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ
ಕರಾವಳಿ ಭಾಗದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವ ವೇಳೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದರೊಂದಿಗೆ ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿರುಗಾಳಿಯ ಸಮಯದಲ್ಲಿ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲೂ ಗಂಟೆಗೆ 30–40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.
ಸಾರ್ವಜನಿಕರಿಗೆ ಮುನ್ನೆಚ್ಚರಿಕೆ
ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳ ಸಾರ್ವಜನಿಕರು ಹಾಗೂ ರೈತರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಿರುಗಾಳಿ ಹಾಗೂ ಗುಡುಗು-ಮಿಂಚಿನ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

