ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಬಿಟ್ಟು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಶಾಲೆ ಸಮೀಪದಲ್ಲಿ ಮಗುವಿನ ಅಳು ಕೇಳಿದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಶಿಶುವನ್ನು ರಕ್ಷಿಸಿದ್ದಾರೆ. ನಂತರ ಮಾನವೀಯತೆ ಮೆರೆದ ಅವರು ಮಗುವಿಗೆ ಬಿಸಿ ನೀರಿನಲ್ಲಿ ಸ್ನಾನ ಮಾಡಿಸಿ, ಹಾಲುಣಿಸಿ ಪ್ರಾಥಮಿಕ ಆರೈಕೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಆರೋಗ್ಯ ಸಹಾಯಕ ಕಾಳಪ್ಪ ಕುಂಬಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ವೈದ್ಯರಿಗೆ ಹಾಗೂ ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕುಕನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರೆಡ್ಡಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಆಂಬುಲೆನ್ಸ್ ಮೂಲಕ ಶಿಶುವನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಕಳುಹಿಸಿದರು. ಬಳಿಕ ಹೆಚ್ಚಿನ ಆರೈಕೆಗೆ ಮಗುವನ್ನು ಕೊಪ್ಪಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

