ಪರೀಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ – ಇಂಧನ ಇಲಾಖೆ ಸಚಿವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

0
2

ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಅಂತಿಮ ಹಂತದ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಸಚಿವರಾದ ಶೀ ಕೆ. ಜೆ. ಜಾರ್ಜ್ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆದ ಜಿಲ್ಲೆ ಎಂಬ ಹೆಗ್ಗಳಿಕೆ ಹೊಂದಿದೆ. ಜಿಲ್ಲೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿಕೊಂಡು ಬರುತ್ತಿದ್ದು, ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮತ್ತು ಫಲಿತಾಂಶಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ ಹಿನ್ನಲೆ ಹೊಂದಿದೆ. ಉಡುಪಿ ಜಿಲ್ಲೆಯಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳು ವಿದ್ಯಾದಾನ ಮಾಡುತ್ತಿದ್ದು, ಹೊರ ಜಿಲ್ಲೆಗಳ ಸಹಸ್ರಾರು ವಿದ್ಯಾರ್ಥಿಗಳೂ ವ್ಯಾಸಂಗ ಮಾಡುತ್ತಿದ್ದಾರೆ.

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಾರ್ಷಿಕ ಪರೀಕ್ಷಾ ಪೂರ್ವ ಸಿದ್ದತೆಗಳು ನಡೆಯುತ್ತಿದ್ದು, ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಶೈಕ್ಷಣಿಕ ಘಟ್ಟವಾಗಿದೆ. ಅಂತಿಮ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕೆ ಹಾಗೂ ಅಭ್ಯಾಸಕ್ಕೆ ಅನುಕೂಲವಾಗಲು ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಕ್ತ ನಿರ್ದೇಶನ ನೀಡಲು ಇಂಧನ ಇಲಾಖೆಯ ಸಚಿವರಾದ ಶ್ರೀ ಕೆ.ಜೆ ಜಾರ್ಜ್ ರವರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗು ಮೆಸ್ಕಾಂ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here