ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆ

0
17

ಮೂಡುಬಿದಿರೆ : ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಮಹಾವೀರ ಕಾಲೇಜಿನ ಪ್ರಾಂಶುಪಾಲರು ಹಾಗೂ ಎಸ್‌ಎಂಸಿ ಟ್ರಸ್ಟ್‌ನ ಕಾರ್ಯದರ್ಶಿ ಡಾ. ರಾಧಾಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

1969ರ ಸೆಪ್ಟೆಂಬರ್ 24ರಂದು ಮಹಾತ್ಮ ಗಾಂಧೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಆರಂಭಿಸಲಾಯಿತು. ಮಹಾತ್ಮ ಗಾಂಧೀಜಿಯವರ ಸೇವಾ ಮನೋಭಾವ, ಸಾಮಾಜಿಕ ಹೊಣೆಗಾರಿಕೆ, ಸ್ವಾವಲಂಬನೆ ಹಾಗೂ ರಾಷ್ಟ್ರ ನಿರ್ಮಾಣದ ಚಿಂತನೆಗಳನ್ನು ಯುವಜನರ ಮೂಲಕ ಸಾಕಾರಗೊಳಿಸುವ ಉದ್ದೇಶದಿಂದ ಎನ್‌ಎಸ್‌ಎಸ್‌ನ್ನು ಪ್ರಾರಂಭಿಸಲಾಯಿತು ಎಂದು ಅವರು ತಿಳಿಸಿದರು.

ಎನ್‌ಎಸ್‌ಎಸ್‌ನ ಧ್ಯೇಯವಾಕ್ಯವು ಸ್ವಾರ್ಥಕ್ಕಿಂತ ಸಮಾಜದ ಹಿತಕ್ಕೆ ಆದ್ಯತೆ ನೀಡುವ ಸಂದೇಶವನ್ನು ಸಾರುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿಯೇ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿರುವ ಸಮಸ್ಯೆಗಳನ್ನು ಕೇವಲ ಗಮನಿಸುವುದಷ್ಟೇ ಅಲ್ಲದೆ, ಅವುಗಳ ಪರಿಹಾರಕ್ಕೆ ತಮ್ಮಿಂದಾದ ಕೊಡುಗೆ ನೀಡುವ ಮನೋಭಾವವನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಮಾತನಾಡಿ, ಎನ್‌ಎಸ್‌ಎಸ್ ಮೂಲಕ ವಿದ್ಯಾರ್ಥಿಗಳಿಗೆ ಸಮಾಜಸೇವೆ, ಸ್ವಚ್ಛತೆ, ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ, ಗ್ರಾಮೀಣಾಭಿವೃದ್ಧಿ ಹಾಗೂ ಸಾಮಾಜಿಕ ಜಾಗೃತಿ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ದೊರೆಯುತ್ತದೆ. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಸಹಕಾರಿಯಾಗುತ್ತವೆ ಎಂದರು.

ಕಾರ್ಯಕ್ರಮಾಧಿಕಾರಿ ಚಿತ್ರಲೇಖಾ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ಮೋನಿಕಾ ಸ್ವಾಗತಿಸಿದರು. ಹಾಸಿತ್ ಚೌದ್ರಿ ವಂದಿಸಿದರು. ಕುಮಾರಿ ಹರ್ಷಿತ ಕಾರ್ಯಕ್ರಮ ನಿರೂಪಿಸಿದರು.