ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ನಡೆದ ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
ಮೃತ ವಿದ್ಯಾರ್ಥಿಯನ್ನು ಉದಯ್ (20) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ಓದಿನ ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್‌ಟೈಂ ಉದ್ಯೋಗ ಕೂಡ ಮಾಡುತ್ತಿದ್ದರು.
ಉದಯ್ ಅವರಿಗಾಗಿ ಪೋಷಕರಾದ ಸುರೇಶ್ ಮತ್ತು ಪ್ರೇಮಲತಾ ದಂಪತಿ ಮನೆಯ ಮೇಲ್ಭಾಗದಲ್ಲಿ ಪ್ರತ್ಯೇಕ ಕೊಠಡಿ ನಿರ್ಮಿಸಿಕೊಟ್ಟಿದ್ದರು. ಇದೇ ಕೊಠಡಿಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಘಟನೆ ನಡೆದ ಬಳಿಕ ಮೂರು ದಿನಗಳ ಕಾಲ ಯಾರಿಗೂ ವಿಷಯ ತಿಳಿದಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬ ಸದಸ್ಯರು ಬಾಗಿಲು ತೆರೆದು ನೋಡಿದಾಗ, ಉದಯ್ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

