ಕೊಪ್ಪಳ : ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪದ ರಾಷ್ಟ್ರೀಯ ಹೆದ್ದಾರಿ–63ರಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45), ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಮಂತ್ರಾಲಯಕ್ಕೆ ತೆರಳುತ್ತಿದ್ದ ಓಮ್ನಿ ವಾಹನಕ್ಕೆ, ಪಕ್ಕದ ರಸ್ತೆಯಿಂದ ಬಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಡಿವೈಡರ್ ದಾಟಿ ಎದುರುಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣವೇ ರಕ್ಷಿಸಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

