ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ವೃಂದ ಸಂಗಳ ಸಹಯೋಗದೊಂದಿಗೆ ನಡೆದ ಸಭೆಯಲ್ಲಿ ಅರ್ನಿದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಮಾ. 11 ರಿಂದ 15ರವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಮಾಡಿ ತರ್ತುಸೇವೆಗಳನ್ನು ಮಾತ್ರ ನಿರ್ವಹಿಸಲಾಗುವುದು ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಸಂದೀಪ್ ಎ.ಎಸ್. ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೇಡಿಕೆ ಈಡೇರದಿದ್ದರೆ ಮಾ.16ರ ನಂತರ ಎಲ್ಲ ಆಸ್ಪತ್ರೆಗಳಲ್ಲಿ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿ, -ನೌಕರರು ಕರ್ತವ್ಯಕ್ಕೆ ಅರ್ನಿಧಿಷ್ಟಾವಧಿವರೆಗೆ ಗೈರು ಹಾಜರಾಗುವ ಮೂಲಕ ಮುಷ್ಕರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆರೋಗ್ಯ ಇಲಾಖೆ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ಆನಂದ್ ಜತ್ತನ್ ಯು. ಮಾತನಾಡಿ, ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧ ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಶೀಘ್ರದಲ್ಲಿ ತಿದ್ದುಪಡಿ ಮಾಡಬೇಕು. ಇಲಾಖೆಯ ಎಲ್ಲ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕು. ಇಲಾಖೆಯ ಅಧಿಕಾರಿ ಹಾಗೂ ನೌಕರರಿಗೆ ಕೂಡಲೇ ಮುಂಬಡ್ತಿ ನೀಡುವುದು, ನಿಯಮ ಪ್ರಕಾರ ಸೇವಾನಿರತ ವೈದ್ಯರು, ಅಧಿಕಾರಿ-ನೌಕರರ ಉನ್ನತ ವ್ಯಾಸಂಗ ಹಾಗೂ ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ನೀಡುವುದು, ಕೇಂದ್ರ ಪುರಸತ ಯೋಜನೆಯಡಿ ಕಾರ್ಯನಿರತ ಸುಮಾರು 6000 ಅಧಿಕಾರಿ-, ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ವೇತನ ನೀಡಬೇಕು ಮುಂತಾದ 12 ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಆರೋಗ್ಯ ಮತ್ತು ವೈದ್ಯಕಿಯ ಶಿಕ್ಷಣ ಇಲಾಖೆಯ ವಿವಿಧ ವೃಂದಗಳ ಕೇಂದ್ರ ಸಂಘವು ಹಲವಾರು ಬಾರಿ ಇಲಾಖೆಯ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಷ್ಕರ ಅನಿವಾರ್ಯವಾಗಲಿದೆ ಎಂದರು.
ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಕಾರ್ಯದರ್ಶಿ ಡಾ. ರಾಜೇಶ್ ಸಿ.ಎಸ್., ರಾಜ್ಯಾಧ್ಯಕ್ಷ ಡಾ. ನಿಖಿಲ್ ಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಉಪಸ್ಥಿತರಿದ್ದರು.

