ನಿರಂತರ ಚಟುವಟಿಕೆಗಳಿಂದ ಸಂಘಟನೆ ಸದೃಢ, ಯಶಸ್ಸು ಶತಸಿದ್ಧ : ಕುತ್ಯಾರು ನವೀನ್ ಶೆಟ್ಟಿ

0
9

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪದಗ್ರಹಣ

ನಿರ್ದಿಷ್ಟ ಗುರಿಯೊಂದಿಗೆ ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ ತತ್ವದೊಂದಿಗೆ ನಿರಂತರ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಪಕ್ಷ ಸಂಘಟನೆ ಸದೃಢಗೊಳ್ಳುವ ಜೊತೆಗೆ ಯಶಸ್ಸು ಶತಸಿದ್ಧ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಿ, ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಮೋರ್ಚಾ ಎಲ್ಲಾ ಹಿಂದುಳಿದ ಸಮಾಜವನ್ನು ಒಗ್ಗೂಡಿಸಿ ಸಂಘಟಿಸುವ ಗುರುತರವಾದ ಹೊಣೆಯನ್ನು ಹೊಂದಿದೆ. ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಮಂಡಲ ಮಟ್ಟದಲ್ಲಿಯೂ ಮೋರ್ಚಾದ ತಂಡಗಳನ್ನು ಸಕ್ರಿಯಗೊಳಿಸಿ ಮುಂದಿನ ಎಲ್ಲಾ ಚುನಾವಣೆಗಳಿಗೆ ಸನ್ನದ್ದರಾಗುವ ಮೂಲಕ ಪಕ್ಷದ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಅತ್ಯಮೂಲ್ಯ ಕೊಡುಗೆ ನೀಡಬೇಕು ಎಂದು ಕುತ್ಯಾರು ಕರೆ ನೀಡಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ ಮೋರ್ಚಾಗಳು ಪಕ್ಷದ ಬಲ ವರ್ಧನೆಗೆ ಶ್ರಮಿಸುತ್ತಿದ್ದು, ಹಿಂದುಳಿದ ವರ್ಗಗಳ ಮೋರ್ಚಾ ಪರಿಣಾಮಕಾರಿಯಾಗಿ ಕೆಲಸಕಾರ್ಯ ನಿರ್ವಹಿಸುವ ಮೋರ್ಚಾಗಳಲ್ಲಿ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಹಿಂದುಳಿದ ವರ್ಗಗಳಿಗೆ ಅನೇಕ ಅವಕಾಶಗಳನ್ನು ನೀಡುವ ಮೂಲಕ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೊಂಡಿದ್ದರೂ, ಕಾಂಗ್ರೆಸ್ ಸರಕಾರ ನಿಗಮಕ್ಕೆ ಚಿಕ್ಕಾಸು ಅನುದಾನವನ್ನೂ ನೀಡದೆ ಹಿಂದುಳಿದ ಸಮುದಾಯವನ್ನು ವಂಚಿಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಪ್ರಚುರಪಡಿಸುವ ಮೂಲಕ ಮುಂದಿನ ಜಿ.ಪಂ., ತಾ.ಪಂ., ಗ್ರಾ.ಪಂ. ಸಹಿತ ಎಲ್ಲಾ ಚುನಾವಣೆಗಳಲ್ಲಿ ಜಿಲ್ಲೆಯಾದ್ಯoತ ಮಗದೊಮ್ಮೆ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಎಲ್ಲಾ ಸಮುದಾಯಗಳು ಕೊಡುಗೆ ನೀಡುವಂತಾಗಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿ ಸಮಾಜದ ವಿವಿಧ ಸ್ತರಗಳಲ್ಲಿ ಸೇವೆಗೈದು ಅನುಭವ ಹೊಂದಿರುವ ಕ್ರಿಯಾಶೀಲ ಕಾರ್ಯಕರ್ತರ ತಂಡ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಲ್ಲಿದೆ. ಪಕ್ಷಕ್ಕಾಗಿ ಸಮಯ ನೀಡಿ ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟಿತ ಪರಿಶ್ರಮದ ಮೂಲಕ ಪಕ್ಷ ಸಂಘಟನೆ ಮತ್ತು ಚುನಾವಣಾ ಗೆಲುವಿಗೆ ಮೋರ್ಚಾದ ಕೊಡುಗೆ ನೀಡೋಣ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಮೋರ್ಚಾ ಪ್ರಭಾರಿ ಉಮೇಶ್ ನಾಯ್ಕ್ ಸಹಿತ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅನಿಲ್ ಕುಮಾರ್ ವಂದಿಸಿದರು.