ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಪಾಡಿಕಲ್ಲು ಬಿಲ್ಲವ ಸಂಘದ ಎದುರಿನ ರಸ್ತೆ ಬದಿಯಲ್ಲಿ ದಟ್ಟವಾಗಿ ಬೆಳೆದಿದ್ದ ಹುಲ್ಲು ತೆರವುಗೊಳಿಸುವ ಕಾರ್ಯವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಅಧಿಕಾರಿಗಳು ಆರಂಭಿಸಿದ್ದಾರೆ.

ಪತ್ರಕರ್ತ ಜಗದೀಶ್ ಪೂಜಾರಿ ಕಡಂದಲೆ ಮನವಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಪೂಪಾಡಿಕಲ್ಲು ಬಿಲ್ಲವ ಸಂಘದ ಎದುರಿನ ಬಸ್ ನಿಲ್ದಾಣದಲ್ಲಿ ಪ್ರತಿದಿನ ಶಾಲಾ ಮಕ್ಕಳು ಬಸ್‌ಗಾಗಿ ಕಾಯುತ್ತಿರುತ್ತಾರೆ. ಮಳೆಗಾಲದಲ್ಲಿ ರಸ್ತೆ ಬದಿಯಲ್ಲಿ ಬೆಳೆದಿದ್ದ ದಟ್ಟ ಹುಲ್ಲಿನ ಕಾರಣ ಮಳೆನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಲ್ಲುತ್ತಿತ್ತು. ಇದರಿಂದ ವೇಗವಾಗಿ ಸಂಚರಿಸುವ ವಾಹನಗಳು ನೀರನ್ನು ಚಿಮ್ಮಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು.
ಈ ಸಮಸ್ಯೆಯ ಕುರಿತು ಸ್ಥಳೀಯರು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿರಲಿಲ್ಲ. ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಶಾಲಾ ಮಕ್ಕಳು ವಿಷಯವನ್ನು ಸ್ಥಳೀಯ ಪತ್ರಕರ್ತ ಗಮನಕ್ಕೆ ತಂದರು. ಕೆಪಿಟಿಸಿಎಲ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ರಸ್ತೆ ಬದಿಯ ಹುಲ್ಲು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿದರು.

ಹುಲ್ಲು ತೆರವು ಕಾರ್ಯದಿಂದ ಮಳೆನೀರು ಸರಾಗವಾಗಿ ಹರಿಯಲು ಅನುಕೂಲವಾಗಲಿದ್ದು, ಬಸ್ ನಿಲ್ದಾಣದಲ್ಲಿ ಕಾಯುವ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆ ನಿವಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಸ್ಪಂದಿಸಿದ ಅಧಿಕಾರಿಗಳಿಗೆ ಹಾಗೂ ಸಹಕರಿಸಿದ ಸುನಿಲ್ ಪೂಜಾರಿ ಕಲ್ಲೋಳ್ಳಿ ಮತ್ತು ಅಜಯ್ ಅವರಿಗೆ ಸ್ಥಳೀಯರು ಕೃತಜ್ಞತೆ ಸಲ್ಲಿಸಿದ್ದಾರೆ.

