ಮಂಗಳೂರು : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಜಿಮಠ ಮೂಲದ ಮನೀಶ್ ಪೂಜಾರಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ಆರೋಪಿ ಮನೀಶ್ ಪೂಜಾರಿ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಸಂಬಂಧ ಬಾಲಕಿ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ತನ್ನ ಗರ್ಭಧಾರಣೆಯ ವಿಚಾರವನ್ನು ಬಾಲಕಿ ಮನೀಶ್‌ಗೆ ತಿಳಿಸಿದಾಗ, ಆತ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದೂರ ಸರಿದಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆಯಿಂದ ತೀವ್ರವಾಗಿ ಮನನೊಂದ ಬಾಲಕಿ ಜೂನ್ 22ರಂದು ತನ್ನ ತಾಯಿಗೆ ನಡೆದಿರುವ ವಿಚಾರವನ್ನು ತಿಳಿಸಿದ್ದಾಳೆ. ಮಗಳಿಗೆ ಧೈರ್ಯ ತುಂಬಿ ಸಮಾಧಾನಪಡಿಸಿದ್ದ ತಾಯಿ, ಮಂಗಳವಾರ ಕೆಲಸಕ್ಕೆ ತೆರಳಿದ್ದು, ಮನೆಗೆ ಮರಳಿದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆಯ ಕುರಿತು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾನೂನು ವಿಧಿಗಳ ಅಡಿಯಲ್ಲಿ ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಂಡಿದ್ದಾರೆ.

