ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸ ಮಾಡಿಸಿ, ಹಲ್ಲೆ ನಡೆಸಿದ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಪುತ್ರ, ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಆತನನ್ನು ಅಪಹರಿಸಿದ್ದಾರೆ ಎನ್ನಲಾಗಿದೆ. ಬಳಿಕ ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಗೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಾಲಕ ಮನೆಗೆ ತೆರಳಲು ಮನವಿ ಮಾಡಿದರೂ ಆರೋಪಿಗಳು ಅವಕಾಶ ನೀಡದೆ ಕೆಲಸ ಮಾಡಿಸಿದ್ದು, ಜೂನ್ 9ರಂದು ಆರೋಪಿಗಳಲ್ಲಿ ಒಬ್ಬನು ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಚೂರಿ ತೋರಿಸಿ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೃಶ್ಯವನ್ನು ಮೂರನೇ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಬಂಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಕೈಗೊಂಡಿದ್ದಾರೆ.

