ಬೆಂಗಳೂರು: ಎಸ್ ಸಿ, ಎಸ್ ಟಿ, ಒಬಿಸಿ ವರ್ಗಗಳ ಅನುದಾನದ ಪಾಲು ಮುಸ್ಲಿಮರ ಪಾಲಾಗುತ್ತದೆ ಎಂಬ ಜಾಹೀರಾತಿಗೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಗೆ ಬೆಂಗಳೂರು ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.
ನೋಟಿಸ್ ತಲುಪಿದ ಏಳು ದಿನಗಳೊಳಗಾಗಿ ಬೆಳಿಗ್ಗೆ 11 ಗಂಟೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ.
ಜನಪ್ರತಿನಿಧಿಗಳ ಕಾಯ್ದೆಯಡಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್ ಸಿ, ಎಸ್ ಟಿ, ಹಿಂದುಳಿದ ವರ್ಗಗಳ ಮೀಸಲಾತಿ ಮುಸ್ಲಿಂ ಪಾಲಾಗುತ್ತಿದೆ ಎಂಬರ್ಥ ವಿಡಿಯೊವೊಂದನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ಮೇ 4ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.