ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಜರ್ಮನಿ ಘಟಕದ ಅಧ್ಯಕ್ಷರಾಗಿ ಪೂಜಾ ಶೆಟ್ಟಿ ಅವರನ್ನು ನೇಮಕ ಮಾಡಿದೆ.
ಮುಲ್ಕಿಯಲ್ಲಿ ಜನಿಸಿದ ಪೂಜಾ ಶೆಟ್ಟಿ ಅವರು ಬಾಲ್ಯವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಕಳೆದಿದ್ದು, 12ನೇ ತರಗತಿಯವರೆಗೆ ಅಲ್ಲಿಯೇ ಶಿಕ್ಷಣ ಪಡೆದಿದ್ದಾರೆ. ನಂತರ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಜೈವ ತಂತ್ರಜ್ಞಾನ ಎಂಜಿನಿಯರಿಂಗ್ ಪದವಿ ಪಡೆದಿದ್ದು, ಜರ್ಮನಿಯ ಮ್ಯೂನಿಚ್‌ನಲ್ಲಿ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ (ಎಂ.ಬಿ.ಎ.) ಪಡೆದಿದ್ದಾರೆ.
ಎಂ.ಬಿ.ಎ. ಪೂರ್ಣಗೊಳಿಸಿದ ಬಳಿಕ ಜರ್ಮನಿಯ ಸುಮಾರು 180 ವರ್ಷಗಳ ಇತಿಹಾಸ ಹೊಂದಿರುವ ಝೈಸ್ ಸಂಸ್ಥೆಯಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು, ಸಂಸ್ಥೆಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸ್ತುತ ಪ್ರಕ್ರಿಯಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವೃತ್ತಿಜೀವನದ ಜೊತೆಗೆ ತುಳು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಪೂಜಾ ಶೆಟ್ಟಿ ಅವರು, ಜರ್ಮನಿಯಲ್ಲಿ ನೆಲೆಸಿರುವ ತುಳುವರನ್ನು ಒಗ್ಗೂಡಿಸಿ ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಆಶಯ ಹೊಂದಿದ್ದಾರೆ. ವಿಶೇಷವಾಗಿ ವಿದೇಶದಲ್ಲಿ ಬೆಳೆದಿರುವ ಯುವ ಪೀಳಿಗೆಗೆ ತುಳು ಭಾಷೆ ಮತ್ತು ಸಂಸ್ಕೃತಿಯ ಪರಿಚಯ ಮಾಡಿಸುವುದು ಹಾಗೂ ಅವರಲ್ಲಿ ತುಳುವಿನ ಬಗ್ಗೆ ಅಭಿಮಾನ ಮೂಡಿಸುವುದು ತಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಜರ್ಮನಿಯಲ್ಲಿ ನೆಲೆಸಿರುವ ತುಳುವರನ್ನು ಒಂದೇ ವೇದಿಕೆಯಡಿ ಸಂಘಟಿಸಿ, ತುಳು ಭಾಷೆ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ, ಮುಂದಿನ ಪೀಳಿಗೆಗೆ ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ತುಳುವರ್ಲ್ಡ್ ಫೌಂಡೇಶನ್ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರ ಮಾರ್ಗದರ್ಶನ ಹಾಗೂ ಪ್ರೇರಣೆ ತಮ್ಮಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಮತ್ತಷ್ಟು ಆಸಕ್ತಿ ಮೂಡಿಸಿದೆ ಎಂದು ಪೂಜಾ ಶೆಟ್ಟಿ ತಿಳಿಸಿದ್ದಾರೆ. ಹಿರಿಯರ ಮಾರ್ಗದರ್ಶನದಲ್ಲಿ ಜರ್ಮನಿಯಲ್ಲಿ ತುಳುವರ ಸಂಘಟನೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೊಡುಗೆ ನೀಡುವ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಅವರ ವೃತ್ತಿಪರ ಅನುಭವ, ಸಂಘಟನಾ ಸಾಮರ್ಥ್ಯ, ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನ ಹಾಗೂ ಜರ್ಮನಿಯಲ್ಲಿ ತುಳುವರನ್ನು ಸಂಘಟಿಸುವ ಉತ್ಸಾಹವನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಅಂತರರಾಷ್ಟ್ರೀಯ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಅವರು ಪೂಜಾ ಶೆಟ್ಟಿ ಅವರನ್ನು ಜರ್ಮನಿ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್‌ನ ಗೌರವಾಧ್ಯಕ್ಷರಾದ ವೇದಮೂರ್ತಿ ಶ್ರೀಹರಿನಾರಾಯಣದಾಸ ಅಸ್ರಣ್ಣ ಕಟೀಲ್, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು, ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹಾಗೂ ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ, ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಕೇಂದ್ರೀಯ ಸಮಿತಿ ಕಾರ್ಯದರ್ಶಿ ಅರವಿಂದ್ ಬೆಲ್ಚಾಡ ಹಾಗೂ ಕೇಂದ್ರೀಯ ಸಮಿತಿ ಸಂಚಾಲಕ ವಿಶ್ವನಾಥ ಆಚಾರ್ಯ ಅವರು ಹರ್ಷದಿಂದ ಸ್ವಾಗತಿಸಿ, ನೂತನ ಜರ್ಮನಿ ಘಟಕದ ಅಧ್ಯಕ್ಷರಾದ ಪೂಜಾ ಶೆಟ್ಟಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಹಾರೈಕೆಗಳನ್ನು ಸಲ್ಲಿಸಿದ್ದಾರೆ.

