ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಆರಂಭದಲ್ಲಿ ಪ್ರದೀಪ್ ಪೂಜಾರಿ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ಪ್ರದೀಪ್ ಪೂಜಾರಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಒಟ್ಟು ಎಂಟು ಮಂದಿ ಆರೋಪಿಗಳಿದ್ದಾರೆ. ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಎಲ್ಲ ಆರೋಪಿಗಳ ಬಂಧನವಾಗಿಲ್ಲ. ಇಬ್ಬರು ಕಾರ್ಮಿಕರನ್ನು ಮಾತ್ರ ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳು ಹಿರಿಯಡ್ಕದಲ್ಲೇ ಇದ್ದರೂ ಪೊಲೀಸರು ಅವರನ್ನು ಬಂಧಿಸಲು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಪ್ರದೀಪ್ ಪೂಜಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಆದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ತನಿಖೆಯಾಗಬೇಕು. ಪ್ರದೀಪ್ ಅವರ ಸಾವಿಗೆ ಸಂಬಂಧಿಸಿದಂತೆ ಹಿರಿಯಡ್ಕ ಠಾಣಾಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿರುವುದು ಪೊಲೀಸರ ಕರ್ತವ್ಯಲೋಪವನ್ನು ಎತ್ತಿತೋರಿಸುತ್ತದೆ ಎಂದು ದೂರಿದರು.
ಜಿಲ್ಲಾ ಪೊಲೀಸರಿಂದ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆಯುವ ವಿಶ್ವಾಸವಿಲ್ಲ. ಹೀಗಾಗಿ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ವಹಿಸಬೇಕು. ಹಿರಿಯಡ್ಕ ಠಾಣಾಧಿಕಾರಿಗಳಿಗೆ ಸಹಕರಿಸಿದ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ವಿಶ್ವ ಹಿಂದೂ ಪರಿಷತ್ನ ಸುನಿಲ್ ಕೆ.ಆರ್., ಶ್ರೀಕಾಂತ್ ಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

