ಪ್ರದೀಪ್ ಪೂಜಾರಿ ಪ್ರಕರಣ: ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ

0
42

ಉಡುಪಿ : ಹಿರಿಯಡ್ಕದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ.

ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು (ಪಿಎಸ್‌ಐ) ಪಶ್ಚಿಮ ವಲಯ ಡಿಐಜಿ ಕಚೇರಿಗೆ ಲಗತ್ತಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ. ಅಲ್ಲದೆ, ಪ್ರದೀಪ್ ಪೂಜಾರಿ ಒಳರೋಗಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ನವೆಂಬರ್ 6ರಂದು ತಿಳಿಸಿದ್ದಾರೆ.

ಪ್ರದೀಪ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದ ಬಳಿಕ ಅವರು ನೀಡಿದ್ದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಬೇಕಾಗಿದ್ದರೂ, ಹಿರಿಯಡ್ಕ ಠಾಣೆಯ ಪಿಎಸ್‌ಐ ಎಫ್‌ಐಆರ್ ಬದಲಿಗೆ ಎನ್‌ಸಿ ಪ್ರಕರಣ ದಾಖಲಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ವಿರುದ್ಧ ಈ ಹಿಂದೆಯೇ ಇಲಾಖಾ ವಿಚಾರಣೆ ಆರಂಭಿಸಲಾಗಿತ್ತು. ಇದೀಗ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವಿಚಾರಣಾ ವರದಿಯ ಆಧಾರದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯಲೋಪದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪ್ರಕರಣದ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದವು.

ಸಾರ್ವಜನಿಕರ ಆಕ್ರೋಶ ಮತ್ತು ವಿವಿಧ ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ಪೊಲೀಸ್ ಇಲಾಖೆ ಆಂತರಿಕ ವಿಚಾರಣೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ.