ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಬಿಲ್ಲವ ಯುವ ವೇದಿಕೆ ಆಗ್ರಹ, ಎಸ್ಪಿಗೆ ಮನವಿ

0
23

ಉಡುಪಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರಿಗೆ ನ್ಯಾಯ ಒದಗಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಗ್ರಹಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಅವರ ನೇತೃತ್ವದಲ್ಲಿ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಬಿಲ್ಲವ ಸಮುದಾಯದ ಮುಖಂಡರು ಹಾಗೂ ಮೃತ ಪ್ರದೀಪ್ ಪೂಜಾರಿ ಅವರ ಕುಟುಂಬಸ್ಥರು ಭಾಗವಹಿಸಿ ಪ್ರಕರಣದ ವಿವಿಧ ಆಯಾಮಗಳ ಕುರಿತು ಚರ್ಚಿಸಿದರು.

ಸಭೆಯ ಬಳಿಕ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಪ್ರಕರಣದ ಕುರಿತು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತನಿಖೆಯನ್ನು ಚುರುಕುಗೊಳಿಸಲು ವಿಶೇಷ ಪೊಲೀಸ್ ತಂಡವನ್ನು ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಕರ್ತವ್ಯ ಲೋಪವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂತ್ರಸ್ತರ ದೂರನ್ನು ಸ್ವೀಕರಿಸದಿರುವ ಆರೋಪದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವುದು ಸಾಬೀತಾದಲ್ಲಿ ಸಂಬಂಧಪಟ್ಟ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ಮುಂದುವರಿದರೆ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಲ್ಲವ ಯುವ ವೇದಿಕೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾದ ನಿಯೋಗವು ಪ್ರಕರಣದ ಕುರಿತು ಮನವಿ ಸಲ್ಲಿಸಿ, ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿತು. ಮನವಿಗೆ ಸ್ಪಂದಿಸಿದ ಸಚಿವರು ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.