ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಸಾವಿನ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಹಾಗೂ ಪ್ರತಿಭಟನೆಗೆ ಅಡ್ಡಿಪಡಿಸುವ ಷಡ್ಯಂತ್ರವನ್ನು ಖಂಡಿಸಿ ನ.4ರಂದು ಉಡುಪಿಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಾಗೂ ಸಹಭಾಗಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಜನಾಗ್ರಹ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪ್ರದೀಪ್ ಪೂಜಾರಿ ಪ್ರಕರಣದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪ ಎದುರಿಸುತ್ತಿರುವ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಅಮಾನತುಗೊಳಿಸುವ ಬದಲು ವರ್ಗಾವಣೆ ಮಾಡಿರುವ ಕ್ರಮ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಡುಗಡೆ ಮಾಡಿರುವ ವಿಡಿಯೋ ಮಾಹಿತಿಯು ಹಲವು ಅನುಮಾನ ಹಾಗೂ ಪ್ರಶ್ನೆಗಳಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಪ್ರಕರಣದಲ್ಲಿ ನೈಜ ಸತ್ಯ ಹೊರಬರಬೇಕು, ಕರ್ತವ್ಯ ಲೋಪ ಎಸಗಿದವರೂ ಸೇರಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣವನ್ನು ರಾಜ್ಯದ ಉನ್ನತ ತನಿಖಾ ಸಂಸ್ಥೆಯಾದ ಅಪರಾಧ ತನಿಖಾ ಇಲಾಖೆಗೆ (ಸಿಓಡಿ) ವರ್ಗಾಯಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂಬುದು ಹೋರಾಟಗಾರರ ಪ್ರಮುಖ ಆಗ್ರಹವಾಗಿದೆ.
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಮಾಜಮುಖಿ ಸಂಘಟನೆಗಳು, ಹೋರಾಟಗಾರರು ಹಾಗೂ ನ್ಯಾಯಪರ ಚಿಂತಕರ ಸಹಭಾಗಿತ್ವದಲ್ಲಿ ನ.4ರ ಬುಧವಾರ ಬೆಳಗ್ಗೆ 10 ಗಂಟೆಗೆ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಮೀಪ ಬೃಹತ್ ಜನಾಗ್ರಹ ಪ್ರತಿಭಟನೆ ನಡೆಯಲಿದ್ದು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುವಂತೆ ಕರೆ ನೀಡಲಾಗಿದೆ.
ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರುವ ಸಮಾಜ ಬಾಂಧವರು, ಯುವಕರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ನ್ಯಾಯಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ನಡೆಯುವ ಹೋರಾಟಕ್ಕೆ ಕೈಜೋಡಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಮನವಿ ಮಾಡಿದ್ದಾರೆ.

