ಪ್ರಧಾನ ಮಂತ್ರಿ ಬಿಮಾ ಯೋಜನೆ ಖಾಸಗಿ, ನೌಕರರ ನೋಂದಣಿ ಕಡ್ಡಾಯ

0
3

ಉಡುಪಿ : ಸಾಮಾಜಿಕ ಭದ್ರತೆಯನ್ನು ಒದಗಿಸುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳು ಪ್ರತಿ ಕುಟುಂಬಕ್ಕೆ ಕನಿಷ್ಠ ವೆಚ್ಚದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಹಾಗೂ ಸರಕಾರಿ ನೌಕರರು ಕಡ್ಡಾಯವಾಗಿ ಈ ಯೋಜನೆಗಳ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ವಿಶಾಲ್ ಆರ್. ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜೀವನದ ಅನಿಶ್ಚಿತತೆಯ ವಿರುದ್ಧ ರಕ್ಷಣೆಗಾಗಿಯೇ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದೆ. ಈ ಯೋಜನೆಗಳು ಸಾಮಾಜಿಕ, ಆರ್ಥಿಕ ಸ್ಥಿತಿಯ ಅಡೆತಡೆಗಳನ್ನು ಮೀರಿ ಜೀವನದ ಎಲ್ಲಾ ಹಂತಗಳಲ್ಲಿ ವ್ಯಕ್ತಿಗಳಿಗೆ ಸುರಕ್ಷತಾ ಜಾಲವನ್ನು ವಿಸ್ತರಿಸುತ್ತದೆ. ಅಲ್ಪ ವಿಮಾ ಮೊತ್ತವನ್ನು ಪಾವತಿಸುವುದರೊಂದಿಗೆ ತ್ವರಿತವಾಗಿ ಕವರೇಜ್‌ಗಳನ್ನು ಪಡೆಯಬಹುದು, ಅನಿರೀಕ್ಷಿತ ಅಪಘಾತಗಳು ಮತ್ತು ಅಂಗವೈಕಲ್ಯಗಳ ವಿರುದ್ಧ ಆರ್ಥಿಕ ರಕ್ಷಣೆಯನ್ನು ಒದಗಿಸುತ್ತದೆ. ಈ ಬಗ್ಗೆ ಬ್ಯಾಂಕ್ ವ್ಯಸ್ಥಾಪಕರು ಗ್ರಾಹಕರಿಗೆ ಮಾಹಿತಿ ನೀಡಬೇಕು ಎಂದರು.

ಮೂಲಸೌಕರ್ಯ ಅಭಿವೃದ್ಧಿಗೆ ಸೂಚನೆ

ಪ್ರವಾಸೋದ್ಯಮದಿಂದ ಸ್ಥಳೀಯ ಜನರಿಗೆ ಹೆಚ್ಚು ಉದ್ಯೋಗಾವಕಾಶ ಸುಲಭವಾಗಿ ದೊರಕುವಂತಾಗುತ್ತದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಬೇಕು. ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಭಕ್ತರುಗಳಿಗೆ ದೇವರ ದರ್ಶನ ಹಾಗೂ ಪ್ರಸಾದದ ವ್ಯವಸ್ಥೆಗಳು ವ್ಯವಸ್ಥಿತವಾಗಿ ಲಭ್ಯವಾಗಬೇಕು. ಭಕ್ತರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಗಳಲ್ಲಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕೇಂದ್ರ ಭಾಗದಲ್ಲಿರುವ ಸ್ಥಳವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಪಡಿಸಬೇಕು. ಇಲ್ಲಿಗೆ ಬರುವ ವಾಹನಗಳ ನಿಲ್ದಾಣಕ್ಕೆ ಅನುಕೂಲವಾಗಲು ವರ್ಟಿಕಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಬೇಕು ಎಂದರು. ಕೊಚ್ಚಿನ್ ಶಿಪ್‌ಯಾರ್ಡ್ನ ಕಾರ್ಯವ್ಯಾಪ್ತಿಗಳನ್ನು ಹೆಚ್ಚಿಸಲು ಅಗತ್ಯ ಸೌಕರ್ಯಗಳನ್ನು ನೀಡಬೇಕು. ಇಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈ ಹಿಂದೆ ಹೆಚ್ಚಿನವರು ಹೊರ ಜಿಲ್ಲೆಯವರೇ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೆ ಪೂರಕವಾಗಿ ಐ.ಟಿ.ಐ ನಲ್ಲಿ ವೃತ್ತಿ ತರಬೇತಿಗಳನ್ನು ಕಲ್ಪಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here