ಉಡುಪಿ: ಜಿಲ್ಲೆಯ ಪ್ರತಿಷ್ಠಿತ ಸೇವಾ ಸಂಸ್ಥೆಗಳಲ್ಲಿ ಒಂದಾದ ಪ್ರಕೃತಿ ಲಯನ್ಸ್ ಕ್ಲಬ್‌ನ 2026-27ನೇ ಸಾಲಿನ ಅಧ್ಯಕ್ಷರಾಗಿ ಖ್ಯಾತ ಸಮಾಜಸೇವಕ, ಧಾರ್ಮಿಕ ಚಿಂತಕ ಹಾಗೂ ಹಲವಾರು ನಿರುದ್ಯೋಗಿ ಯುವಕರಿಗೆ ಉದ್ಯೋಗದಾತರಾಗಿರುವ ಪ್ರಮೋದ್ ಕುಮಾರ್ ಶೆಟ್ಟಿ ಹಾವಂಜೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಮೋದ್ ಕುಮಾರ್ ಶೆಟ್ಟಿ ಅವರು ಹಲವು ಸಾಮಾಜಿಕ, ಧಾರ್ಮಿಕ ಹಾಗೂ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಅನೇಕ ಬಡ ಕುಟುಂಬಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯವನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಅವರು ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಕೃತಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳಾಗಿ ಕಾರ್ಯದರ್ಶಿಯಾಗಿ ಪ್ರಶಾಂತ್ ಸಿರೂರು, ಖಜಾಂಚಿಯಾಗಿ ಸದಾಶಿವ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ್ ವಿ. ಶೆಟ್ಟಿ ಮತ್ತು ಮುರಳೀಧರ ರಾವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಮೋದ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರಕೃತಿ ಲಯನ್ಸ್ ಕ್ಲಬ್ ಇನ್ನಷ್ಟು ಜನಪರ ಸೇವಾ ಕಾರ್ಯಗಳನ್ನು ಕೈಗೊಂಡು, ಉಡುಪಿ ಜಿಲ್ಲೆಯ ವಿವಿಧ ಸಾಮಾಜಿಕ ಸಮಸ್ಯೆಗಳ ಪರಿಹಾರ ಹಾಗೂ ಬಡವರು, ವಿದ್ಯಾರ್ಥಿಗಳು ಮತ್ತು ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲಿ ಎಂಬುದು ಎಲ್ಲರ ಆಶಯವಾಗಿದೆ.
ಅವರ ಅಧ್ಯಕ್ಷತೆಯಲ್ಲಿ ಪ್ರಕೃತಿ ಲಯನ್ಸ್ ಕ್ಲಬ್ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಸಮಾಜ ಸೇವೆಯ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಿ ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಶುಭ ಹಾರೈಸಿದ್ದಾರೆ.

