ಉಡುಪಿಯಲ್ಲಿ ‘ಕದಳೀ ವಿಶ್ವದರ್ಶನ’ ಬಾಳೆ ಮೇಳಕ್ಕೆ ಸಿದ್ಧತೆ: ಸುಗಮ ಸಂಚಾರ, ಪಾರ್ಕಿಂಗ್ ವ್ಯವಸ್ಥೆಗೆ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ

0
8

ಉಡುಪಿ: ಸೋದೆ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ಎರಡನೇ ಶ್ರೀಕೃಷ್ಣ ಪೂಜಾ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ವಿವಿಧ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನವೆಂಬರ್ 29ರಂದು ನಡೆಯಲಿರುವ ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತ ಹಾಗೂ ಇದೇ ಸಂದರ್ಭದಲ್ಲಿ ಆಯೋಜಿಸಲಾಗಿರುವ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳದ ವ್ಯವಸ್ಥೆಗಳ ಕುರಿತು ಅಧಿಕಾರಿಗಳ ಸಭೆ ನಡೆಯಿತು.

ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದ ಸಮೀಪ ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ ಮೇಳ ನಡೆಯಲಿದೆ.

ಪರಮಪೂಜ್ಯ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಸಭೆಯಲ್ಲಿ ಉಡುಪಿ ಜಿಲ್ಲಾಡಳಿತ, ನಗರಸಭೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಬಾಳೆ ಮುಹೂರ್ತ ಹಾಗೂ ಬಾಳೆ ಮೇಳಕ್ಕೆ ಆಗಮಿಸುವ ಭಕ್ತರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿಶೇಷವಾಗಿ ಸ್ವಚ್ಛತೆ, ಸುಗಮ ಸಂಚಾರ ವ್ಯವಸ್ಥೆ, ವಾಹನಗಳ ಪಾರ್ಕಿಂಗ್, ಭದ್ರತೆ ಹಾಗೂ ಆರೋಗ್ಯ ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕೆ ಹಾಗೂ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀಕೃಷ್ಣ ಪರ್ಯಾಯ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳ ಅಂಗವಾಗಿ ನಡೆಯಲಿರುವ ಈ ಬಾಳೆ ಮೇಳವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಜೊತೆಗೆ ಬಾಳೆ ಕೃಷಿ ಮತ್ತು ಅದರ ವೈವಿಧ್ಯತೆಯನ್ನು ಪರಿಚಯಿಸುವ ವಿಶೇಷ ವೇದಿಕೆಯಾಗಲಿದೆ.