ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಗಳೂರಿನ ಪಾದ್ರಿ ಸಿಪ್ರಿಯನ್ ಪಿಂಟೋ ಮತ್ತೆ ಅರೆಸ್ಟ್!
ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರು, ಇದೀಗ ಎರಡನೇ ಬಾರಿ ಪೊಲೀಸರ ವಶಕ್ಕೆ ಸಿಲುಕಿದ್ದಾರೆ. ನ್ಯಾಯಾಲಯವು ಆರೋಪಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್ನಲ್ಲಿ ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಿಪ್ರಿಯನ್ ಪಿಂಟೋ ಅವರು, 13 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ 2026ರ ಮೇ 13ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರಿನ ಆಧಾರದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರೇಟ್ನ ಕೇಂದ್ರ ವಿಭಾಗದ ಎಸಿಪಿಗೆ ವಹಿಸಲಾಗಿತ್ತು.
ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಸಿಪ್ರಿಯನ್ ಪಿಂಟೋ ಅವರನ್ನು ಇದೀಗ ಮತ್ತೆ ಬಂಧಿಸಲಾಗಿದ್ದು, ನ್ಯಾಯಾಲಯವು ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಾಲಕನಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಈ ಪ್ರಕರಣದ ಕುರಿತು ಹೋರಾಟ ನಡೆಸುತ್ತಿದೆ.

