ಮಂಗಳೂರು: ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ಮಾಡಿ ಮತ ಯಾಚಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಅಪಾರ ಜನಸ್ತೋಮದತ್ತ ಕೈ ಬೀಸುತ್ತಾ ಮೋದಿ ರೋಡ್ ಶೋ ಹಾದಿಯಲ್ಲಿ ಸಾಗಿದರು.
ಬ್ರಹ್ಮಶ್ರೀ ನಾರಾಯಣಗುರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮೋದಿ, ಹೂವುಗಳಿಂದ ಅಲಂಕೃತಗೊಂಡಿದ್ದ ವಾಹನದಲ್ಲಿ ಅಭಿಮಾನಿಗಳತ್ತ ಕೈ ಬೀಸಿ ಸಾಗಿದರು. ಮೋದಿಯವರ ಚುನಾವಣಾ ಪ್ರಚಾರದ ರೋಡ್ ಶೋಗೆ ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದರು. ಘೋಷಣೆಗಳನ್ನು ಕೂಗಿದ ಕಾರ್ಯಕರ್ತರ ಹರ್ಷ ಮುಗಿಲುಮುಟ್ಟಿತು. ಮೋದಿ ಅವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರುಗಳು ಜೊತೆಗಿದ್ದರು. ನಾಯಕರ ಜೊತೆಗೆ ಪಕ್ಷದ ಹಿರಿಯ ಕಾರ್ಯಕರ್ತರು, ವಿವಿಧ ಸಮಾಜಗಳ ಮುಖಂಡರು ಸೇರಿದಂತೆ 15 ಮಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಪಕ್ಷದ ಕಾರ್ಯಕರ್ತರು ರಸ್ತೆಯ ಬದಿಯಲ್ಲಿ ನಿಂತಿದ್ದ ಕಾರ್ಯಕರ್ತರಿಗೆ ಅಲ್ಲಲ್ಲಿ ಕುಡಿಯುವ ನೀರು, ಮಸಾಲ ಮಜ್ಜಿಗೆ, ತಂಪು ಪಾನೀಯಗಳನ್ನು ಉಚಿತವಾಗಿ ವಿತರಿಸಿದರು.