ಕೊಳಲಗಿರಿ ವಾರದ ಸಂತೆಗೆ ಮೂಲ ಸೌಕರ್ಯ ಕಲ್ಪಿಸಿ: ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಆಗ್ರಹ

0
9

ಉಡುಪಿ: ಉಪ್ಪುರು ಗ್ರಾಮದ ಕೊಳಲಗಿರಿ ಪ್ರದೇಶದಲ್ಲಿ ಪ್ರತಿ ಮಂಗಳವಾರ ನಡೆಯುವ ವಾರದ ಸಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದರೂ, ಅಗತ್ಯ ಮೂಲ ಸೌಕರ್ಯಗಳ ಕೊರತೆಯಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಹೇಳಿದ್ದಾರೆ.

ಉಪ್ಪುರು ಗ್ರಾಮ ಪಂಚಾಯಿತಿಯಿಂದ ಸಂತೆಯಲ್ಲಿ ಸುಂಕ ವಸೂಲಿ ಮಾಡಲಾಗುತ್ತಿದೆಯಾದರೂ, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿಲ್ಲ. ಉಪ್ಪುರು, ಹಾವಂಜೆ, ಆರೂರು, ಕುಕ್ಕೆಹಳ್ಳಿ, ಪೆರಂಪಳ್ಳಿ, ಮಣಿಪಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಪ್ರತೀ ಮಂಗಳವಾರ ನೂರಾರು ರೈತರು ಮತ್ತು ಸಾರ್ವಜನಿಕರು ಈ ಸಂತೆಗೆ ಆಗಮಿಸುತ್ತಾರೆ.

ಆದರೆ ಸಂತೆ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳು ತುಂಬಿಕೊಂಡಿದ್ದು, ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತಿದೆ. ಮಹಿಳೆಯರಿಗೆ ಸೂಕ್ತ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವ್ಯಾಪಾರಸ್ಥರಿಗೆ ರಕ್ಷಣೆ ನೀಡುವ ರೂಫಿಂಗ್ ಶೀಟ್ ವ್ಯವಸ್ಥೆ, ಭದ್ರತೆಗಾಗಿ ಸಿಸಿ ಕ್ಯಾಮೆರಾಗಳು ಹಾಗೂ ವಾಹನ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ವೇಳೆ ಸಂತೆ ಪರಿಸರದಲ್ಲಿ ಮಾಂಸ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ರೈತರು, ವ್ಯಾಪಾರಸ್ಥರು, ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕರು ಆತಂಕದಲ್ಲೇ ಸಂತೆಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಉಡುಪಿ ಎಪಿಎಂಸಿ ಹಾಗೂ ಉಪ್ಪುರು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಡುವ ಈ ಸಂತೆ ಪ್ರದೇಶದಲ್ಲಿ ಸ್ವಚ್ಛತೆ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆ ಹಾಗೂ ಸ್ಥಳೀಯ ಆಡಳಿತ ತಕ್ಷಣ ಕ್ರಮ ಕೈಗೊಂಡು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸತೀಶ್ ಪೂಜಾರಿ ಕೀಳಂಜೆ ಒತ್ತಾಯಿಸಿದ್ದಾರೆ.

“ಸುಂಕ ವಸೂಲಿ ಮಾತ್ರವಲ್ಲ, ಸೌಲಭ್ಯವೂ ಬೇಕು”

ಕೊಳಲಗಿರಿ ವಾರದ ಸಂತೆ ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ವ್ಯಾಪಾರ ವಹಿವಾಟು ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಸಾರ್ವಜನಿಕರು, ರೈತರು ಮತ್ತು ವ್ಯಾಪಾರಸ್ಥರ ಹಿತದೃಷ್ಟಿಯಿಂದ ಅಗತ್ಯ ಮೂಲ ಸೌಕರ್ಯಗಳನ್ನು ಆದಷ್ಟು ಬೇಗ ಕಲ್ಪಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here