ದಾವಣಗೆರೆ : ರಾಜ್ಯ ಸರ್ಕಾರವು 2400 ಚದರ ಅಡಿ ವ್ಯಾಪ್ತಿಯ ನಿವೇಶನಗಳಲ್ಲಿ ನಿರ್ಮಾಣಗೊಂಡಿರುವ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈಗಾಗಲೇ 4000 ಚದರ ಅಡಿ ನಿವೇಶನಗಳಲ್ಲಿ ನಿರ್ಮಾಣ ಪೂರ್ಣಗೊಂಡಿರುವ ವಸತಿ ಮನೆಗಳಿಗೂ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಟ್ಟಡ ನಿರ್ಮಾಣದ ಆರಂಭಿಕ ಹಂತದಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಿ, ನಿರ್ಮಾಣ ಪೂರ್ಣಗೊಂಡ ನಂತರ ಶಾಶ್ವತ ಸಂಪರ್ಕ ನಿರಾಕರಿಸುವುದು ನ್ಯಾಯಸಮ್ಮತವಲ್ಲ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ, ಬ್ಯಾಂಕ್ ಸಾಲ ಹಾಗೂ ಇತರೆ ಆರ್ಥಿಕ ಹೊರೆಗಳನ್ನು ಹೊತ್ತು ಮನೆ ನಿರ್ಮಿಸಿರುವ ಸಾವಿರಾರು ಕುಟುಂಬಗಳು ವಿದ್ಯುತ್ ಸೌಲಭ್ಯವಿಲ್ಲದೆ ಸಂಕಷ್ಟ ಅನುಭವಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
“ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. 2400 ಚದರ ಅಡಿ ಮನೆಗಳಿಗೆ ಒಂದು ನಿಯಮ ಮತ್ತು 4000 ಚದರ ಅಡಿ ಮನೆಗಳಿಗೆ ಮತ್ತೊಂದು ನಿಯಮ ಜಾರಿಗೊಳಿಸುವುದು ಸರಿಯಲ್ಲ. ಈಗಾಗಲೇ ನಿರ್ಮಾಣ ಪೂರ್ಣಗೊಂಡಿರುವ ಮನೆಗಳಿಗೆ ಅಗತ್ಯವಿದ್ದರೆ ದಂಡ ವಿಧಿಸಿ, ‘ಒನ್ ಟೈಮ್ ಸೆಟಲ್ಮೆಂಟ್’ ಯೋಜನೆಯಡಿ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಿ ಸಮಸ್ಯೆ ಬಗೆಹರಿಸಬೇಕು” ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.
ಕಟ್ಟಡ ನಿರ್ಮಾಣ ಆರಂಭವಾದ ಸಂದರ್ಭದಲ್ಲೇ ಸಂಬAಧಿಸಿದ ಇಲಾಖೆಗಳು ನಿಯಮಗಳ ಕುರಿತು ಸ್ಪಷ್ಟ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದರೆ ಇಂತಹ ಸಮಸ್ಯೆ ಎದುರಾಗುತ್ತಿರಲಿಲ್ಲ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಹೊಸ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ನಿರ್ಬಂಧಗಳಿಂದ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ತೀವ್ರ ಹೊಡೆತ ಬಿದ್ದಿದ್ದು, ಕಟ್ಟಡ ಸಾಮಗ್ರಿಗಳ ತಯಾರಕರು, ವಿತರಕರು, ಬೆಸ್ಕಾಂ, ಕಂದಾಯ ಇಲಾಖೆ, ಬ್ಯಾಂಕಿAಗ್ ವಲಯ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಬ್-ರಿಜಿಸ್ಟ್ರಾರ್ ಕಚೇರಿಗಳ ಆರ್ಥಿಕ ಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ. ಇದರಿಂದ ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡು ನಿರುದ್ಯೋಗ ಹೆಚ್ಚಾಗುವ ಆತಂಕವೂ ಎದುರಾಗಿದೆ.
ವಿದ್ಯುತ್ ಒಂದು ಮೂಲಭೂತ ಸೌಲಭ್ಯವಾಗಿದ್ದು, ಅದರಿಲ್ಲದೆ ಸಾಮಾನ್ಯ ಜೀವನ ನಡೆಸುವುದು ಕಷ್ಟಕರವಾಗಿದೆ. ಆದ್ದರಿಂದ ಈಗಾಗಲೇ ನಿರ್ಮಾಣ ಪೂರ್ಣಗೊಂಡಿರುವ ಎಲ್ಲಾ ವಸತಿ ಕಟ್ಟಡಗಳಿಗೆ ತಕ್ಷಣ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಹೊಸ ನಿಯಮಗಳನ್ನು ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಹೊಸ ಕಟ್ಟಡಗಳಿಗೆ ಮಾತ್ರ ಅನ್ವಯಿಸುವಂತೆ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಜನಪರ ಹಾಗೂ ಪ್ರಾಯೋಗಿಕ ನಿರ್ಧಾರ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

– ಹೆಚ್.ವಿ. ಮಂಜುನಾಥ ಸ್ವಾಮಿ
