ಪುತ್ತೂರು: ದರ್ಬೆಯಲ್ಲಿ ನಡೆದ ಅಹಿತಕರ ಘಟನೆ ವೇಳೆ ಪೊಲೀಸ್ ಜೀಪಿನೊಳಗೆ ನುಗ್ಗಿ ಹಲ್ಲೆ ನಡೆಸಿದವರ ವಿರುದ್ಧ ದಾಖಲಿಸಿರುವ ಪ್ರಕರಣ ಹಾಗೂ ತನಿಖೆಯ ಬಳಿಕ ಕೈಗೊಂಡಿರುವ ಕ್ರಮಗಳ ಕುರಿತು ದಾಖಲೆ ಸಮೇತ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ.
ದರ್ಬೆಯ ಲ್ಯಾಮಿನೇಷನ್ ಅಂಗಡಿಯಲ್ಲಿ ನೀಡಲಾಗಿದ್ದ ದಾಖಲೆಯೊಂದಕ್ಕೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಈ ಪ್ರಕರಣದಲ್ಲಿ ಅಂಗಡಿಯ ಮಾಲಕಿ ಅಂಜನಾ ಪೈ ಹಾಗೂ ಅವರ ಪುತ್ರ ಸುದರ್ಶನ್ ಪೈ ವಿರುದ್ಧ ಪೊಲೀಸರು ಕೊಲೆಯತ್ನ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಸುದರ್ಶನ್ ಪೈ ಅವರನ್ನು ಬಂಧಿಸಲಾಗಿತ್ತು.
ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಅಂಜನಾ ಪೈ ಹಾಗೂ ಸುದರ್ಶನ್ ಪೈ ಅವರು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆಯಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್‌ಶ್ಯಾಂ ವಾದ ಮಂಡಿಸಿ, ಪೊಲೀಸ್ ಜೀಪಿನೊಳಗೆ ನುಗ್ಗಿ ದೂರುದಾರರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಪೊಲೀಸರು ಲಘು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಆದರೆ ಹಲ್ಲೆಗೊಳಗಾದವರ ಮೇಲೆಯೇ ಕೊಲೆಯತ್ನದಂತಹ ಗಂಭೀರ ಆರೋಪದಡಿ ಪ್ರಕರಣ ದಾಖಲಿಸಿ ಪೊಲೀಸರು ಏಕಪಕ್ಷೀಯವಾಗಿ ವರ್ತಿಸಿದ್ದಾರೆ ಎಂದು ವಾದಿಸಿದರು.
ಪೊಲೀಸರ ಸಮ್ಮುಖದಲ್ಲಿಯೇ ಪೊಲೀಸ್ ಜೀಪಿನೊಳಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪವನ್ನು ನ್ಯಾಯಪೀಠ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆ ನಡೆದಿದ್ದರೆ ಅದರ ವಿರುದ್ಧ ಪೊಲೀಸರು ಯಾವ ರೀತಿಯ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಹೀಗಾಗಿ ಪೊಲೀಸ್ ಜೀಪಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಯಾವ ಪ್ರಕರಣ ದಾಖಲಿಸಲಾಗಿದೆ, ತನಿಖೆ ಯಾವ ಹಂತದಲ್ಲಿದೆ ಹಾಗೂ ತನಿಖೆಯ ಬಳಿಕ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸಂಪೂರ್ಣ ದಾಖಲೆಗಳೊಂದಿಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 29ರಂದು ನಡೆಯಲಿದೆ. ಈ ಪ್ರಕರಣದಲ್ಲಿ ವಕೀಲ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದಾರೆ.

