ಸಾಂಬಾರಿನಲ್ಲಿ ಜಿರಳೆ ಆರೋಪದ ಬೆನ್ನಲ್ಲೇ ದಾಳಿ : ಅಡುಗೆ ಕೋಣೆಯಲ್ಲಿ ಲೋಪ ಪತ್ತೆ

0
15

ತೊಕ್ಕೊಟ್ಟು : ಹೋಟೆಲ್‌ನ ಊಟದ ಸಾಂಬಾರಿನಲ್ಲಿ ಜಿರಳೆ ಬಿದ್ದಿದೆ ಎಂದು ಗ್ರಾಹಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ತೊಕ್ಕೊಟ್ಟುವಿನ ಹೋಟೆಲೊಂದಕ್ಕೆ ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆಯನ್ನು ತಪಾಸಣೆ ನಡೆಸಿದರು.

ತಪಾಸಣೆ ವೇಳೆ ಅಡುಗೆ ಕೋಣೆಯಲ್ಲಿ ಅಶುಚಿತ್ವ ಕಂಡುಬಂದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೆ, ಪ್ರಕರಣವನ್ನು ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ನ್ಯಾಯಾಲಯದಲ್ಲಿ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಎಲ್ಲೆಂದರಲ್ಲಿ ಆಹಾರ ಪದಾರ್ಥಗಳ ಸಂಗ್ರಹ

ತಪಾಸಣೆ ಸಂದರ್ಭದಲ್ಲಿ ಹೋಟೆಲ್‌ನ ಅಡುಗೆ ಕೋಣೆಯಲ್ಲಿ ಆಹಾರ ಪದಾರ್ಥಗಳನ್ನು ದಾಸ್ತಾನು ಮಾಡಲು ಪ್ರತ್ಯೇಕ ಕೊಠಡಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸದೆ ಅಡುಗೆ ಕೋಣೆಯ ವಿವಿಧೆಡೆ ರಾಶಿ ಹಾಕಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿ ಸಂಗ್ರಹಿಸಲಾಗಿದ್ದ ವಸ್ತುಗಳನ್ನು ತೆರವುಗೊಳಿಸಿ, ಅಡುಗೆ ಕೋಣೆ ಹಾಗೂ ಆಹಾರ ಸಂಗ್ರಹಣಾ ಪ್ರದೇಶದಲ್ಲಿ ಸಂಪೂರ್ಣ ಶುಚಿತ್ವ ಕಾಪಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಆಹಾರ ಸುರಕ್ಷತೆಗೆ ಆದ್ಯತೆ

ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಹಾಗೂ ಪ್ರತ್ಯೇಕವಾಗಿ ಜೋಡಿಸಿಡುವಂತೆ ಹೋಟೆಲ್ ಮಾಲೀಕರಿಗೆ ಸೂಚಿಸಲಾಗಿದೆ. ಆಹಾರ ತಯಾರಿಸುವ ಸ್ಥಳದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಕಡ್ಡಾಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಸಿದೆ.

ಸಾರ್ವಜನಿಕ ಆರೋಗ್ಯದೊಂದಿಗೆ ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ತೋರಿಸುವ ಆಹಾರ ಉದ್ದಿಮೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಗ್ರಾಹಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ತಪಾಸಣಾ ಕಾರ್ಯ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.