ಮಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಕಲಬುರಗಿ, ರಾಯಚೂರು, ಬಾಗಲಕೋಟೆ, ಬೀದರ್, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಇದೇ ವೇಳೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಬಳ್ಳಾರಿ, ಚಾಮರಾಜನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 60 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಸಾರ್ವಜನಿಕರು, ರೈತರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ. ಕರಾವಳಿ ಭಾಗದ ಮೀನುಗಾರರು ಮುಂದಿನ ಸೂಚನೆ ಬರುವವರೆಗೆ ಸಮುದ್ರಕ್ಕೆ ತೆರಳದಂತೆ ವಿಶೇಷ ಎಚ್ಚರಿಕೆ ನೀಡಲಾಗಿದೆ.

