ರಾಮ್ ಜಿ ಕಾಯ್ದೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ – ವಾರ್ತಾಲಾಪ ಕಾರ್ಯಾಗಾರ ಉದ್ಘಾಟಿಸಿ ಕೋಟ ಶ್ರೀನಿವಾಸ ಪೂಜಾರಿ

0
12

ನರೇಗಾ ಯೋಜನೆಯಲ್ಲಿ ಸುಮಾರು 22 ಸಾವಿರ ಕೋಟಿ ರೂ. ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ವಿಕಸಿತ ಭಾರತ ಜಿ ರಾಮ್ ಜಿ ಕಾಯ್ದೆ ಜಾರಿಗೆ ಬಂದಿದೆ. ಇದರಿಂದ ಅನುದಾನ ಬಳಕೆಯಲ್ಲಿ ಹೆಚ್ಚಿನ ಪಾರದರ್ಶಕತೆ ಕಾಣಲು ಸಾಧ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ವತಿಯಿಂದ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ‘ವಾರ್ತಾಲಾಪ’ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಉದ್ಯೋಗದ ದಿನಗಳನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸುವ ಮೂಲಕ ಗ್ರಾಮೀಣ ಜನರ ಜೀವನೋಪಾಯ ಸುಭದ್ರವಾಗಲಿದೆ. ಅಭಿವೃದ್ಧಿಯ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂಬುದು ಪ್ರಜಾಪ್ರಭುತ್ವದ ಆಶಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು, ಜಿಲ್ಲಾ ಮತ್ತು ಗ್ರಾಮ ಆಡಳಿತಗಳ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಆಯುಷ್ಮಾನ ಭಾರತ ಆರೋಗ್ಯ ಯೋಜನೆ, ಜನೌಷಧಿ ಕೇಂದ್ರಗಳು ಜನರಿಗೆ ಉತ್ತಮ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಿಂದ 25 ಲಕ್ಷ ಟನ್ ಕಡಲ ಆಹಾರ ಉತ್ಪಾದನೆಯಾಗುತ್ತಿರುವುದು ವಿಶೇಷ. ಇದರಿಂದ ಮೀನುಗಾರರಿಗೆ ಬಹಳಷ್ಟು ಅನುಕೂಲವಾಗಿದೆ ಎಂದರು.

ಜನರ ಆರ್ಥಿಕ ಸಬಲೀಕರಣಕ್ಕಾಗಿ ಮುದ್ರಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಜೀವನ ಸುರಕ್ಷಾ ಯೋಜನೆ, ಪ್ರತಿ ಮನೆಗೂ ನೀರು ಪೂರೈಸುವ ಜಲಜೀವನ ಮಿಷನ್, ಹೆಣ್ಣು ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಬೇಟಿ ಬಚಾವೋ ಬೇಟಿ ಪಡಾವೋ, ಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ವಿಶ್ವಕರ್ಮ ಹೀಗೆ ಎಲ್ಲ ವಲಯಗಳಿಗೂ ಕೇಂದ್ರ ಸರ್ಕಾರ ಆದ್ಯತೆ ನೀಡಿ, ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಈ ಯೋಜನೆಗಳನ್ನು ಎಲ್ಲರಿಗೂ ತಲುಪಿಸುವಲ್ಲಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸಮ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಅನೇಕ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಉಡುಪಿ ಜಿಲ್ಲೆ ಉಳಿದ ಜಿಲ್ಲೆಗಳಿಗಿಂತ ಮುಂದಿದೆ. ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದ ಸಾಗರಮಾಲಾ, ಪ್ರಸಾದ್ ಯೋಜನೆಗಳಿಂದ ಹೆಚ್ಚಿನ ಪ್ರಯೋಜನ ಲಭಿಸಬೇಕು. ಸಿಎಸ್ಆರ್ ನಿಧಿಯನ್ನು ಬಳಸಿಕೊಂಡು ಪ್ರಗತಿಯ ವೇಗ ಹೆಚ್ಚಿಸಬೇಕು ಎಂದು ಹೇಳಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಬಿ., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುಬ್ರಮಣ್ಯ ಜಿ. ಕುರ್ಯ ಮತ್ತಿತರರು ಉಪಸ್ಥಿತರಿದ್ದರು.

ವಿಕಸಿತ ಭಾರತ ಜಿ ರಾಮ್ ಜಿ ಯೋಜನೆ ಕುರಿತು ಎಡಿಪಿಸಿ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ವಿಜಯ ಶ್ಯಾ ಮ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದ ಕುರಿತು ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಭಿವೃದ್ಧಿ ಅಧಿಕಾರಿ ಡಾ. ಪ್ರಶಾಂತ ಭಟ್, ನೂತನ ಕಾರ್ಮಿಕ ಕಾನೂನುಗಳ ಕುರಿತು ಮಂಗಳೂರು ಇಎಸ್ಐಸಿ ಉಪ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ವಿಜಯ್ ಆನಂದ್ ಎ.ಟಿ., ಪಿಎಂ-ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಕುರಿತು ಮೆಸ್ಕಾಂನ ಅಧೀಕ್ಷಕ ಅಭಿಯಂತರ ನರಸಿಂಹ, ಆರ್ಥಿಕ ಸಬಲೀಕರಣದ ಕುರಿತು ಉಡುಪಿ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಹರೀಶ್ ಜಿ. ಮಾಹಿತಿ ಹಂಚಿಕೊಂಡರು.

LEAVE A REPLY

Please enter your comment!
Please enter your name here