ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಮೇಶ್ ಶೆಟ್ಟಿ ಶಂಕರಘಟ್ಟ ಆಗ್ರಹ

0
6

ಶಿವಮೊಗ್ಗ : ಇದೇ ತಿಂಗಳು 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಘೋಷಣೆ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಹಾಗೂ ಬಂಟರ ಮುಖಂಡರಾದ ರಮೇಶ್ ಶೆಟ್ಟಿ ಶಂಕರಘಟ್ಟ ಇವರು ಆಗ್ರಹಿಸಿದ್ದಾರೆ.

ಅವರು ಈ ಕುರಿತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಬಂಟರು ಇಂದು ವ್ಯಾಪಾರ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರ ಹಾಗು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪು ಮೂಡಿಸಿದ್ದಾರೆ. ಅತ್ಯಂತ ಮುಂದುವರಿದ ಜನಾಂಗವಾಗಿದ್ದರೂ ಕೂಡ ಆ ಜನಾಂಗದಲ್ಲಿಯೂ ಇನ್ನೂ ತಮ್ಮ ಮೂಲ ಕಸುಬಾದ ಒಕ್ಕಲುತನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಜನಾಂಗದ ಯುವಕರು ಉದ್ಯೋಗವನ್ನು ಹರಸಿ ದೂರದ ಮುಂಬೈ, ದುಬೈಗಳಲ್ಲಿ ಹೋಟೆಲ್ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವುದನ್ನು ಗಮನಿಸಬಹುದಾಗಿದೆ. ಇನ್ನೂ ಕೂಡ ಈ ಜನಾಂಗದವರು ಅತ್ಯಂತ ಬಡತನದಿಂದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಟ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟದಲ್ಲಿ ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಘೋಷಣೆ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರ ಮುಖಾಂತರ ಸಲ್ಲಿಸಲಾಗಿದೆ ಎಂದು ಮಾಹಿತಿಯನ್ನು ಪತ್ರಿಕೆಯೊಂದಿಗೆ ಹಂಚಿಕೊಂಡಿದ್ದಾರೆ