ಧಾರವಾಡ : ವಿದ್ಯಾನಗರಿ ಧಾರವಾಡದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. 14 ವರ್ಷದ ಅಪ್ರಾಪ್ತ ಬಾಲಕಿಗೆ ಪ್ರೀತಿಯ ಜಾಲ ಬೀಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಖಾಜಾಸಾಬ್ ಪಠಾಣ್ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯು ಸ್ಥಳೀಯ ಶಾಲೆಯೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡು, ಆಕೆಗೆ ಪ್ರೀತಿಯ ಆಮಿಷ ಒಡ್ಡಿದ್ದಾನೆ ಎನ್ನಲಾಗಿದೆ. ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಬಾಲಕಿಯೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಯನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಯ ಮೊಬೈಲ್ ಪರಿಶೀಲಿಸಿದಾಗ, ಅಪ್ರಾಪ್ತ ಬಾಲಕಿಯೊಂದಿಗಿನ ಕೆಲವು ಆಕ್ಷೇಪಾರ್ಹ ಹಾಗೂ ಖಾಸಗಿ ಫೋಟೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ವಿದ್ಯಾಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದ್ದು, ಘಟನೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

