ಮಂಗಳೂರು : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನೆಪದಲ್ಲಿ ಪುಸಲಾಯಿಸಿ ಪದೇಪದೇ ಅತ್ಯಾಚಾರ ಎಸಗಿದಲ್ಲದೆ, ನಗ್ನ ಚಿತ್ರಗಳನ್ನು ಸಂಗ್ರಹಿಸಿ ವೈರಲ್ ಮಾಡುವುದಾಗಿ ಹಾಗೂ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ದೇವಿನಗರ, ಕುಂಜತ್ತಬೈಲ್ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರದಂತೆ, 2024ರ ಫೆಬ್ರವರಿಯಲ್ಲಿ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಪ್ರೀತಿಸುವುದಾಗಿ ನಂಬಿಸಿ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ಬಳಿಕ 2024ರ ಸೆಪ್ಟೆಂಬರ್‌ನಿಂದ 2025ರ ಜೂನ್‌ವರೆಗೆ ಶಕ್ತಿನಗರ ಹಾಗೂ ಅಳಪೆ ಗ್ರಾಮದ ವಿವಿಧ ಸ್ಥಳಗಳಿಗೆ ಕರೆದುಕೊಂಡು ಹೋಗಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದರ ಜೊತೆಗೆ, ಬಾಲಕಿ ಸ್ನಾನಗೃಹದಲ್ಲಿದ್ದ ವೇಳೆ ವಿಡಿಯೊ ಕರೆ ಮಾಡಿ ಆಕೆಯ ನಗ್ನ ದೃಶ್ಯಗಳ ಸ್ಕ್ರೀನ್‌ಶಾಟ್‌ಗಳನ್ನು ತನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡಿದ್ದ. ಬಳಿಕ ದೈಹಿಕ ಸಂಪರ್ಕಕ್ಕೆ ಸಹಕರಿಸದಿದ್ದರೆ ಆ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಬಾಲಕಿ, ಆಕೆಯ ತಾಯಿ ಹಾಗೂ ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನೂ ಒಡ್ಡಿದ್ದ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಟಿ.ಡಿ. ನಾಗರಾಜ್ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.
ಸಾಕ್ಷ್ಯಾಧಾರಗಳು ಹಾಗೂ ವಾದಗಳನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ, ಪೋಕ್ಸೊ ಕಾಯ್ದೆಯ ಕಲಂ 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಅಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50,000 ದಂಡ ವಿಧಿಸಿದೆ.
ಇದಲ್ಲದೆ, ಬಿಎನ್‌ಎಸ್ ಕಲಂ 77, ಪೋಕ್ಸೊ ಕಾಯ್ದೆ ಕಲಂ 15 ಹಾಗೂ ಮಾಹಿತಿ ತಂತ್ರಜ್ಞಾನ (IT) ಕಾಯ್ದೆ ಕಲಂ 66(E) ಅಡಿ ತಲಾ ಒಂದು ವರ್ಷದ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ.
ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಿರುವ ಈ ತೀರ್ಪು ಇಂತಹ ಅಪರಾಧಗಳಿಗೆ ತಡೆಯೊಡ್ಡುವ ಮಹತ್ವದ ಸಂದೇಶವಾಗಿದೆ.

