ಉಡುಪಿ : ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಪ್ತು ಉತ್ತೇಜನ ಸಮಿತಿ ಸಭೆ, ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೈಗಾರಿಕೋದ್ಯಮಿಗಳು ಕೈಗಾರಿಕಾ ಘಟಕ ಸ್ಥಾಪನೆಗೆ ಪಡೆದಿರುವ ನಿವೇಶನಗಳಲ್ಲಿ ಉದ್ದಿಮೆ ಆರಂಭಿಸದೇ ಹೆಚ್ಚುವರಿ ಕಾಲಾವಕಾಶ ಕೋರಿ ಮನವಿ ಸಲ್ಲಿಸುತ್ತಿದ್ದಾರೆ. ಅಸಮರ್ಪಕ ಕಾರಣ ನೀಡಿ ಕಾರ್ಯಚಟುವಟಿಕೆ ಆರಂಭಿಸದೇ ಇರುವ ನಿವೇಶನಗಳನ್ನು ಹೊಸದಾಗಿ ಅರ್ಜಿ ಸಲ್ಲಿಸಿರುವ ಆಸಕ್ತರುಗಳಿಗೆ ಮರು ಹಂಚಿಕೆ ಮಾಡಲು ಆದ್ಯತೆಯ ಮೇಲೆ ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದ್ದಲ್ಲಿ ಆರ್ಥಿಕತೆಯ ಅಭಿವೃದ್ಧಿಯ ಜೊತೆಗೆ ಹೆಚ್ಚಿನ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಈ ನಿಟ್ಟಿನಲ್ಲಿ ಕೈಗಾರಿಕಾ ಘಟಕ ಆರಂಭಿಸಲು ಮುಂದೆ ಬರುವ ನವ ಉದ್ದಿಮೆದಾರರಿಗೆ ಪ್ರ್ರೋತ್ಸಾಹ ನೀಡಬೇಕು. ಜಿಲ್ಲೆಯಲ್ಲಿ ರಫ್ತು ಉದ್ಯಮವನ್ನು ಉತ್ತೇಜಿಸಲು ಎಕ್ಸ್ಪೋರ್ಟ್ ಇನ್ಸ್ಪೆಕ್ಷನ್ ಏಜೆನ್ಸಿ ಅಧಿಕಾರಿಯನ್ನು ಶೀಘ್ರವಾಗಿ ನಿಯೋಜಿಸಬೇಕು ಎಂದರು.
ಹೊಸ ಕೈಗಾರಿಕಾ ಪ್ರದೇಶ ನಿಮಾರ್ಣಕ್ಕೆ ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕ್ರೆ ಹಾಗೂ ಕೆರೆಬೆಟ್ಟುವಿನಲ್ಲಿ 38.75 ಎಕ್ರೆ ಖಾಸಗಿ ಹಾಗೂ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 113.59 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಈಗಾಗಲೇ ಕೆ.ಐ.ಎ.ಡಿ.ಬಿ.ಗೆ ಸೂಚಿಸಲಾಗಿದೆ. 36.56 ಎಕ್ರೆ ಸರ್ಕಾರಿ ಜಮೀನು ಮಂಜೂರು ಮಾಡಲು ಗುರುತಿಸಿರುವ ಕೆಲವು ಸರ್ವೇ ನಂಬರ್ಗಳು ಅರಣ್ಯ ಹಾಗೂ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆ, ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ, ವರದಿ ನೀಡುವಂತೆ ತಿಳಿಸಿದರು.
ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಭೂ ಸ್ವಾಧಿನ ಪ್ರಕ್ರಿಯೆ ಕೈಗೊಂಡು, ಒಂದು ತಿಂಗಳ ಒಳಗಾಗಿ ಪರಿಹಾರ ಧನವನ್ನು ಸಂತ್ರಸ್ತರಿಗೆ ಹಸ್ತಾಂತರಿಸಬೇಕು. ಪರಿಹಾರ ಪಡೆಯಲು ಹಿಂದೇಟು ಹಾಕುವ ಭೂ ಮಾಲಕರಿಗೆ ಸಂಬಂಧಿಸಿದ ಪರಿಹಾರ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.
ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6307 ಫಲಾನುಭವಿಗಳಿಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ. 3992 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3675 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಫಲಾನುಭವಿಗಳ 526 ಘಟಕಗಳಿಗೆ 20.27 ಕೋಟಿ ರೂ. ಮಾರ್ಜಿನ್ ಹಣ ಬಿಡುಗಡೆಯಾಗಬೇಕಿದ್ದು, ಈವರೆಗೆ 222 ಘಟಕಗಳಿಗೆ 8.31 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ. ಬಾಕಿ ಉಳಿದ 304 ಘಟಕಗಳಿಗೆ 11.96 ಕೋಟಿ ರೂ. ಮಾರ್ಜಿನ ಹಣ ಶೀಘ್ರದಲ್ಲಿ ನೀಡಲು ಕ್ರಮವಹಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

