ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಗಳಿಗೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಪ್ರಕಟಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತ ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ಪಾಲಕರು ವಿಶೇಷ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.
ಅದೇ ರೀತಿ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರ ಮತ್ತು ಸಮುದ್ರತೀರ ಪ್ರದೇಶಗಳಿಗೆ ತೆರಳುವುದನ್ನು ಸಂಪೂರ್ಣವಾಗಿ ತಪ್ಪಿಸಿಕೊಳ್ಳುವಂತೆ ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ, ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ನಿರ್ದೇಶಿಸಲಾಗಿದೆ.
ಜೊತೆಗೆ, ಸಂಬಂಧಿತ ಇಲಾಖೆಗಳು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಆದೇಶಿಸಲಾಗಿದೆ.
ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಅಥವಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.

