ಕಾರ್ಕಳ: ತಾಲೂಕಿನ ಕಣಂಜಾರು ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಆದಿ ದ್ರಾವಿಡ ಸಮುದಾಯದ ಅನೇಕ ಕುಟುಂಬಗಳು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಶೋಚನೀಯ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದು, ಅವರಿಗೆ ತಕ್ಷಣ ಮನೆ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನ ಬಿಡುಗಡೆಗೊಳಿಸಿ ಶಾಶ್ವತ ವಸತಿ ಕಲ್ಪಿಸಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಕರ್ನಾಟಕ ಭೀಮ್ ಸೇನೆ (ರಿ.) ಉಡುಪಿ ಜಿಲ್ಲಾ ಅಧ್ಯಕ್ಷ ಸುಧಾಕರ್ ದಾನಶಾಲೆ ಆಗ್ರಹಿಸಿದ್ದಾರೆ.
ಕಣಂಜಾರು ಗ್ರಾಮದಲ್ಲಿ ಆದಿ ದ್ರಾವಿಡ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಬಹುತೇಕ ಕುಟುಂಬಗಳು ಕೂಲಿ ಕಾರ್ಮಿಕರಾಗಿ ದುಡಿಯುತ್ತ ಜೀವನ ನಿರ್ವಹಿಸುತ್ತಿವೆ. ಆರ್ಥಿಕ ಸಂಕಷ್ಟದಿಂದಾಗಿ ಹಲವು ಮನೆಗಳು ಶಿಥಿಲಾವಸ್ಥೆಯಲ್ಲಿದ್ದು, ವಾಸಕ್ಕೆ ಯೋಗ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಮುದಾಯದ ಕುಟ್ಟಿ ಎಂಬ ವ್ಯಕ್ತಿಗೆ ಸ್ವಂತವಾಗಿ ಸುರಕ್ಷಿತ ಮನೆ ಇಲ್ಲದೆ, ಟರ್ಪಾಲು ಹೊದಿಸಿದ ತಾತ್ಕಾಲಿಕ ಆಶ್ರಯದಲ್ಲಿ ಜೀವನ ಸಾಗಿಸುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಕಳೆದರೂ ಪರಿಶಿಷ್ಟ ಜಾತಿಯ ಕೆಲ ಸಮುದಾಯಗಳು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವುದು ವಿಷಾದನೀಯ. ಸರ್ಕಾರ ಇಂತಹ ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಶಾಶ್ವತ ವಸತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಸುಧಾಕರ್ ದಾನಶಾಲೆ ಆಗ್ರಹಿಸಿದ್ದಾರೆ.

