ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಮನವಿ

0
79

ಮೂಡುಬಿದಿರೆ : ತಾಲೂಕಿನ ಕಡಂದಲೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗೆ ಎರಡು ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಜಗದೀಶ್ ಕೋಟ್ಯಾನ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಗದೀಶ್ ಪೂಜಾರಿ ಅವರು ಮಿಥುನ್ ರೈ ಅವರನ್ನು ಭೇಟಿ ಮಾಡಿ ಶಾಲೆಯ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದರು. ಈಗಿರುವ ಕೊಠಡಿಗಳು ವಿದ್ಯಾರ್ಥಿಗಳ ಸಂಖ್ಯೆಗೆ ಸಾಕಾಗುತ್ತಿಲ್ಲ. ಇದರಿಂದ ಬೋಧನೆ ಹಾಗೂ ಕಲಿಕಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಅತ್ಯವಶ್ಯಕವಾಗಿದೆ ಎಂದು ಅವರು ಮನವಿಯಲ್ಲಿ ತಿಳಿಸಿದರು.

ಶಾಲೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಂಡು, ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಅವರು ಮನವಿ ಮಾಡಿದರು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಮಿಥುನ್ ರೈ ಅವರು ಶಾಲೆಯ ಅಗತ್ಯತೆ ಕುರಿತು ಪರಿಶೀಲನೆ ನಡೆಸಿ, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಸಾಧ್ಯವಾದ ನೆರವು ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.