ಉಪ್ಪೂರು : ಗ್ರಾಮದ ಪರಾರಿ-ಕೊಳಲಗಿರಿ ಪ್ರದೇಶದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಇತ್ತೀಚಿನ ದಾಳಿಯಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ಅವರ ಮನವಿ ಮತ್ತು ದೂರವಾಣಿ ಕರೆಯ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯಲು ಶೀಘ್ರದಲ್ಲೇ ಪಂಜರ (ಬೋನು) ಅಳವಡಿಸುವುದಾಗಿ ಭರವಸೆ ನೀಡಿದ್ದಾರೆ.
ನಿನ್ನೆ ರಾತ್ರಿ ಶಾಮ್ ನಾಯ್ಕ್ ಹಾಗೂ ಮಧುಸೂದ ನಾಯ್ಕ್ ಅವರ ಮನೆಗಳ ಬಳಿ ಚಿರತೆ ದಾಳಿ ನಡೆಸಿದ್ದು, ಸಾಕು ಕೋಳಿಗಳು, ನಾಯಿಮರಿಗಳು ಮತ್ತು ನಾಯಿಗಳ ಮೇಲೆ ದಾಳಿ ಮಾಡಿದೆ. ದಾಳಿಯ ವೇಳೆ ಒಂದು ನಾಯಿಯನ್ನು ಸ್ಥಳದಲ್ಲೇ ಕೊಂದು ಹಾಕಿರುವ ಚಿರತೆ, ಮತ್ತೊಂದು ನಾಯಿಯನ್ನು ಆಹಾರವಾಗಿ ಕೊಂಡೊಯ್ದಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳು ಭಯಭೀತರಾಗಿದ್ದು, ವಿಷಯ ತಿಳಿದ ತಕ್ಷಣ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಸ್ಥಳೀಯರೊಂದಿಗೆ ಸಂಪರ್ಕ ಸಾಧಿಸಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಗಮನಕ್ಕೆ ವಿಷಯವನ್ನು ತಂದಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಚಿರತೆಯನ್ನು ಸೆರೆಹಿಡಿಯಲು ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಸತೀಶ್ ಪೂಜಾರಿ ಅಮ್ಮುಂಜೆ ದಾಳಿಗೊಳಗಾದ ಮನೆಗಳಿಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಗ್ರಾಮದಲ್ಲಿ ಬೀದಿ ದೀಪಗಳ ಕೊರತೆ ಹಾಗೂ ರಸ್ತೆ ಬದಿಯ ಪೊದೆಗಳ ಸಮಸ್ಯೆ ಬಗ್ಗೆ ಸ್ಥಳೀಯರು ಗಮನ ಸೆಳೆದಿದ್ದು, ಈ ಬಗ್ಗೆ ಪಂಚಾಯಿತಿ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಚಿರತೆ ಹಾವಳಿಯಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ತಕ್ಷಣ ಸ್ಪಂದಿಸಿ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರಿಗೆ ಶಾಮ್ ನಾಯ್ಕ್, ಮಧುಸೂದ ನಾಯ್ಕ್ ಹಾಗೂ ಸ್ಥಳೀಯ ನಿವಾಸಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಅದೇ ರೀತಿ ದಾಳಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಸತೀಶ್ ಪೂಜಾರಿ ಅಮ್ಮಂಜಿ ಅವರ ಕಾರ್ಯವೈಖರಿಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಶೀಘ್ರವಾಗಿ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

