ಉಪ್ಪಿನಂಗಡಿ: ಕೂಟೇಲು ಸಮೀಪ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಾರ್ಕಳದ ನಕ್ರೆ ನಿವಾಸಿಗಳಾದ ಕುಟುಂಬ ಸದಸ್ಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದರ್ಶನಕ್ಕಾಗಿ ವ್ಯಾಗನರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಉಪ್ಪಿನಂಗಡಿಯ ಕೂಟೇಲು ಸಮೀಪ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ವೇಳೆ ಕಾರಿನೊಳಗೆ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ರಕ್ಷಿಸುವಲ್ಲಿ ಸ್ಥಳೀಯರಾದ ಯು.ಟಿ. ಫಾಯಾಜ್, ವಿದ್ಯಾಧರ ಜೈನ್, ಝಕಾರಿಯಾ ಹಾಗೂ ಇತರರು ಮಹತ್ವದ ಪಾತ್ರ ವಹಿಸಿದರು. ಬಳಿಕ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು.
ಇದೇ ವೇಳೆ ಲಾರಿ ಚಾಲಕ ದಾಮೋದರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

