ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿರುವ ಚುನಾವಣಾಧಿಕಾರಿಗಳ ತಂಡ, ಈ ಸಂಬಂಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಇತರ ಇಬ್ಬರ ವಿರುದ್ಧ ಎಫ್ ಐಆರ್ ದಾಖಲಿಸಿದೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ತಪಾಸಣೆ ನಡೆಸಿದಾಗ ಶನಿವಾರ 2 ಕೋಟಿ ರೂಪಾಯಿ ಪತ್ತೆಯಾಗಿತ್ತು. ಅದು ಬಿಜೆಪಿ ರಾಜ್ಯ ಘಟಕಕ್ಕೆ ಸೇರಿದ್ದು ಎಂಬುದಾಗಿ ಕಾರಿನಲ್ಲಿದ್ದವರು ದಾಖಲೆ ಒದಗಿಸಿದ್ದರು. ಬಳಿಕ ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು, ನಗದನ್ನು ನೀಡಿ, ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದರು. ದಾಖಲೆ ಇರುವುದರಿಂದ ಐಟಿ ಕಾಯ್ದೆ ಉಲ್ಲಂಘನೆ ಆಗಿಲ್ಲ ಎಂದು ಐಟಿ ಅಧಿಕಾರಿಗಳು ಚುನಾವಣಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಗದನ್ನು ಚುನಾವಣಾಧಿಕಾರಿಗಳ ವಶಕ್ಕೆ ಮರಳಿಸಲಾಗಿದೆ. ಚುನಾವಣಾ ಆಯೋಗದ ನಿರ್ದೇಶನಗಳನ್ನು ಉಲ್ಲಂಘಿಸಿ ನಗದು ಸಾಗಿಸುತ್ತಿದ್ದ ಆರೋಪದ ಮೇಲೆ ಇದೀಗ ನ್ಯಾಯಾಲಯದ ಅನುಮತಿ ಪಡೆದು ಎಫ್ ಐಆರ್ ದಾಖಲಿಸಿದ್ದಾರೆ.