ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ : ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ

0
6

ಬೆಳ್ತಂಗಡಿ : ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಸೇರಿದಂತೆ ಒಟ್ಟು ರೂ.4.00 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಎರಡೂ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನೂತನ ಕಟ್ಟಡಗಳ ನಿರ್ಮಾಣದ ತುರ್ತು ಅಗತ್ಯತೆಯ ಬಗ್ಗೆ ಮಾನ್ಯ ಸಚಿವರ ಗಮನಕ್ಕೆ ವಿಷಯವನ್ನು ತಂದು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಿರಂತರವಾಗಿ ಅನುಸರಣೆ ನಡೆಸಿ ಅನುದಾನ ಬಿಡುಗಡೆಗೊಳಿಸಲು ಮನವಿ ಮಾಡಲಾಗಿತ್ತು. ಸರ್ಕಾರವು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅನುದಾನ ಮಂಜೂರು ಮಾಡಿರುವುದು ಸಂತಸದ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ನೂತನ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿ ಪೂರ್ಣಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಸುರಕ್ಷಿತ, ಆಧುನಿಕ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣದೊಂದಿಗೆ ಅಗತ್ಯ ವಸತಿ ಸೌಲಭ್ಯಗಳು ಲಭ್ಯವಾಗಲಿವೆ.

ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ, ಮಾನ್ಯ ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here