
ಮಂಗಳೂರು: ಕಥಾಬಿಂದು ಪ್ರಕಾಶನದ ರೂವಾರಿ, ಕಾದಂಬರಿಕಾರ ಹಾಗೂ ಸಂಘಟಕರಾದ ಪಿ.ವಿ. ಪ್ರದೀಪ್ ಕುಮಾರ್ ಅವರು ಕನ್ನಡ ಭವನದ ಅಂತರ್ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ–2026ಕ್ಕೆ ಆಯ್ಕೆಯಾಗಿದ್ದಾರೆ.
ಗಡಿನಾಡು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ನವೆಂಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ಕನ್ನಡ ಭವನದ ಕನ್ನಡ ಭುವನೇಶ್ವರಿ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಅವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇರಳ ಮತ್ತು ಕರ್ನಾಟಕದ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕ ಸರಕಾರದ ವಾಣಿಜ್ಯ ತೆರಿಗೆ ಇಲಾಖೆಯ ಕನ್ನಡ ಸಂಘದ ಸಹಭಾಗಿತ್ವದಲ್ಲಿ ಈ ಬಾರಿಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೊಡುಗೆ ನೀಡಿದ ಅಂತರ್ರಾಜ್ಯ ಮಟ್ಟದ 10 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಕಥಾಬಿಂದು ಪ್ರಕಾಶನದ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಹಾಗೂ ಸಂಘಟಕರಾಗಿ ಗುರುತಿಸಿಕೊಂಡಿರುವ ಪಿ.ವಿ. ಪ್ರದೀಪ್ ಕುಮಾರ್ ಅವರ ಆಯ್ಕೆಗೆ ಸಾಹಿತ್ಯಾಸಕ್ತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಕಾರ್ಯದರ್ಶಿ ವಸಂತ್ ಕೆರೆಮನೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ತಿಳಿಸಿದ್ದಾರೆ.
