ಉಡುಪಿ: ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮುದರಂಗಡಿ ಸೇಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶಿಯಾ ಸಚಿನ್ ಪುತ್ರನ್ ಅವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲೆಯ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 14 ವರ್ಷದೊಳಗಿನ ವಯೋಮಾನದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಶಿಯಾ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಅಲ್ಲದೆ, ಲಾಂಗ್ ಜಂಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದು, ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶಿಯಾ ಅವರ ಸಾಧನೆ ಶಾಲೆ, ಪೋಷಕರು ಹಾಗೂ ಊರಿನವರಿಗೆ ಹೆಮ್ಮೆಯ ಸಂಗತಿಯಾಗಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ಮತ್ತಷ್ಟು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳಲಿ ಎಂದು ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

