ಉಪ್ಪಿನಂಗಡಿ : ಕೌಟುಂಬಿಕ ಕಲಹದಿಂದ ಕೋಪಗೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಮನೆಯ ಸಮೀಪದ ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಮಧ್ಯಾಹ್ನ ಸಂಭವಿಸಿದೆ. ಘಟನೆಯಲ್ಲಿ ಮೂರು ವರ್ಷದ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೆರ್ನೆ ನಿವಾಸಿ ಸಿನಾನ್ (32) ಹಾಗೂ ಅವರ ಪತ್ನಿ ನೂರುನ್ನಿಸಾ (28) ನಡುವೆ ದೂರವಾಣಿ ಕರೆಯ ಸಂದರ್ಭದಲ್ಲಿ ವೈವಾಹಿಕ ವಿಚಾರವಾಗಿ ಕಲಹ ಉಂಟಾಗಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರು ಮಕ್ಕಳನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪತಿಯ ತಂಗಿಯ ಮೂರು ವರ್ಷದ ಮಗು ಮೃತಪಟ್ಟಿತ್ತು. ನೂರುನ್ನಿಸಾಳ ಮಗುವನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ಹಿಂದಿನ ನಿಖರ ಕಾರಣ, ಕುಟುಂಬದಲ್ಲಿನ ಕಲಹದ ಸ್ವರೂಪ ಹಾಗೂ ಘಟನೆ ನಡೆದ ಸಂದರ್ಭದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಗುವಿನ ಮರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

