ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶುಕ್ರವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆತಂಕ ಸೃಷ್ಟಿಸಿದೆ. ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರಿನ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬಾರ್ಕೂರು ಕಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದವರು.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಐವನ್ ರಿಚರ್ಡ್ ಅವರು ಶುಕ್ರವಾರ ಮುಂಜಾನೆ ತಾವು ಪರಿಚಯವಿದ್ದ ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಕಾರನ್ನು ಅಡ್ಡಗಟ್ಟಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ರಿಚರ್ಡ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಆರೋಪಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯ ವೇಳೆ ಕಾರಿನಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿರುವುದಾಗಿ ತಿಳಿದುಬಂದಿದ್ದು, ಆಕೆಯ ಮಾಹಿತಿಯ ಆಧಾರದ ಮೇಲೆ ಪರಾರಿಯಾದ ಆರೋಪಿಯ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ.
ಮೃತ ಐವನ್ ರಿಚರ್ಡ್ ಅವರು ಹಲವು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರೆಂದು ತಿಳಿದುಬಂದಿದೆ. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಅಥವಾ ಇತರೆ ಕಾರಣಗಳಿಂದ ಈ ಕೊಲೆ ನಡೆದಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಕೊಲೆಯ ನಿಖರ ಕಾರಣ ತನಿಖೆಯ ಬಳಿಕವೇ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಎಸ್‌ಪಿ ಸುಧಾಕರ್ ನಾಯಕ್, ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆಯ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್‌ಐಗಳಾದ ನಂಜಾ ನಾಯ್ಕ ಹಾಗೂ ಪುಷ್ಪಾ ಅನೂಪ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸೋಕೋ (Scene of Crime Officer) ತಂಡ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.

