ಲಂಚ ಪ್ರಕರಣಗಳಲ್ಲಿ ಮಹತ್ವದ ತೀರ್ಪು: ಬೇಡಿಕೆ ಮತ್ತು ಸ್ವೀಕಾರಕ್ಕೆ ಸಾಕ್ಷ್ಯ ಕಡ್ಡಾಯ ಎಂದ ಹೈಕೋರ್ಟ್

0
8

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಲಂಚ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಕೇವಲ ಲಂಚದ ಹಣ ಪತ್ತೆಯಾದರೆ ಮಾತ್ರ ಸರ್ಕಾರಿ ಅಧಿಕಾರಿಯನ್ನು ಅಪರಾಧಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಲಂಚಕ್ಕೆ ನಿರ್ದಿಷ್ಟವಾಗಿ ಬೇಡಿಕೆ ಇಟ್ಟಿದ್ದಾನೆ ಹಾಗೂ ಹಣವನ್ನು ಸ್ವೀಕರಿಸಿದ್ದಾನೆ ಎಂಬುದಕ್ಕೆ ತನಿಖಾ ಸಂಸ್ಥೆಗಳು ದೃಢವಾದ ಸಾಕ್ಷ್ಯ ಒದಗಿಸುವುದು ಕಡ್ಡಾಯ ಎಂದು ಹೈಕೋರ್ಟ್ ಹೇಳಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಜಯಚಂದ್ರ ಅವರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಹಿಂದೆ ಚಿಕ್ಕಬಳ್ಳಾಪುರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜಯಚಂದ್ರ ಅವರಿಗೆ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಆರೋಪದ ಪರವಾಗಿ ಸಮರ್ಪಕ ಸಾಕ್ಷ್ಯಾಧಾರಗಳ ಕೊರತೆ ಇರುವುದನ್ನು ಗಮನಿಸಿ, ಆರೋಪಿಯನ್ನು ಖುಲಾಸೆಗೊಳಿಸಿ ಕೆಳ ನ್ಯಾಯಾಲಯದ ಶಿಕ್ಷೆಯ ಆದೇಶವನ್ನು ರದ್ದುಗೊಳಿಸಿದೆ.

ಪ್ರಕರಣದ ವಿವರದಂತೆ, ರೈತರೊಬ್ಬರಿಗೆ ಕೃಷಿಕರೆಂಬ ಪ್ರಮಾಣಪತ್ರ ನೀಡಲು ಜಯಚಂದ್ರ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಲಂಚದ ಬೇಡಿಕೆ ಮತ್ತು ಹಣ ಸ್ವೀಕರಿಸಿರುವುದನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ತನಿಖಾ ಸಂಸ್ಥೆ ವಿಫಲವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ತೀರ್ಪಿನಲ್ಲಿ, ಕೇವಲ ಆರೋಪಿಯ ಬಳಿ ಲಂಚದ ಹಣ ಪತ್ತೆಯಾಗಿದೆ ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗುವುದಿಲ್ಲ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಹಾಗೂ ಹಣವನ್ನು ಸ್ವೀಕರಿಸಿರುವುದನ್ನು ವಿಶ್ವಾಸಾರ್ಹ ಸಾಕ್ಷ್ಯಗಳ ಮೂಲಕ ಸಾಬೀತುಪಡಿಸಬೇಕು ಎಂದು ನ್ಯಾಯಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ತೀರ್ಪು ಭ್ರಷ್ಟಾಚಾರ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯಲ್ಲಿ ಸಾಕ್ಷ್ಯಾಧಾರಗಳ ಮಹತ್ವವನ್ನು ಮತ್ತೊಮ್ಮೆ ಒತ್ತಿಹೇಳುವ ಪ್ರಮುಖ ತೀರ್ಪಾಗಿ ಪರಿಗಣಿಸಲಾಗಿದೆ.

LEAVE A REPLY

Please enter your comment!
Please enter your name here