ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷೆಯಾಗಿ ಸವಿತಾ ಟಿ.ಎನ್. ಆಯ್ಕೆ

0
25

ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷೆಯಾಗಿ ಸವಿತಾ ಟಿ.ಎನ್. ಅವರು ಆಯ್ಕೆಯಾಗಿದ್ದಾರೆ.
ಸವಿತಾ ಟಿ.ಎನ್. ಅವರು 2000–2005ರ ಅವಧಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದು, 2003ರಿಂದ 2005ರವರೆಗೆ ತಾಲೂಕು ಪಂಚಾಯತ್ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿ 2 ಅಂಗನವಾಡಿ ಕಟ್ಟಡಗಳು, 3 ಕಿಂಡಿ ಅಣೆಕಟ್ಟುಗಳು, 12 ಮೋರಿಗಳು ಹಾಗೂ ಕಿಟ್ಟಿ ಭಟ್ಟರ ಮನೆಯ ಸಮೀಪ 1 ಸಣ್ಣ ಸೇತುವೆ ನಿರ್ಮಾಣ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಪಾಲಡ್ಕ ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದ ಸಂದರ್ಭದಲ್ಲಿ ತಾವು ಪ್ರತಿನಿಧಿಸಿದ್ದ 3ನೇ ವಾರ್ಡ್‌ನ ಅಭಿವೃದ್ಧಿಗೆ ಸುಮಾರು ₹4.5 ಕೋಟಿಗೂ ಅಧಿಕ ಅನುದಾನ ತಂದು ಕಾಂಕ್ರೀಟ್ ರಸ್ತೆ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಇದರ ಜೊತೆಗೆ, ಪುತ್ತಿಗೆ ಗ್ರಾಮದ ಕುಂಗೂರು ಕೇಂದ್ರವಾಗಿ ಸುಮಾರು 40ಕ್ಕೂ ಹೆಚ್ಚು ಯುವತಿಯರನ್ನು ಒಗ್ಗೂಡಿಸಿ “ದಿವ್ಯಜ್ಯೋತಿ” ಯುವತಿ ಮಂಡಲದ ಅಧ್ಯಕ್ಷೆಯಾಗಿ ಮಹಿಳಾ ಸಬಲೀಕರಣ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರಸ್ತುತ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ “ಸಂಜೀವಿನಿ” ಒಕ್ಕೂಟದ ಅಧ್ಯಕ್ಷೆಯಾಗಿ ಕಳೆದ ಎರಡು ವರ್ಷಗಳಿಂದ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಜನಮೆಚ್ಚುಗೆ ಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷೆಯಾಗಿ ಅವರ ಆಯ್ಕೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ