ಉಪ್ಪುರು: ಉಪ್ಪುರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮ್ಮುಂಜೆ ಬಬ್ಬುಸ್ವಾಮಿ ದೇವಸ್ಥಾನದಿಂದ ಸಾಲ್ಮರವರೆಗೆ ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರ ಆಗ್ರಹ ಶ್ರೀ ಬಬ್ಬುಸ್ವಾಮಿ ದೇವಸ್ಥಾನದ ಸಮೀಪದಿಂದ ಸಾಲ್ಮರ ಎರಡನೇ ವಾರ್ಡ್‌ವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಕಳೆದ ಹಲವು ವರ್ಷಗಳಿಂದ ಕಚ್ಚಾ ರಸ್ತೆಯಾಗಿಯೇ ಉಳಿದಿದ್ದು, ಸುಮಾರು 100ಕ್ಕೂ ಹೆಚ್ಚು ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿವೆ.
ಅಮುಂಜೆ ಶ್ರೀ ಬಬ್ಬುಸ್ವಾಮಿ ದೇವಸ್ಥಾನದ ಹಿಂಭಾಗದಿಂದ ಶ್ರೀಮತಿ ಭವಾನಿ ಮೆಂಡನ್ ಅವರ ಮನೆವರೆಗೆ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆ ಇನ್ನೂ ಮಣ್ಣಿನ ರಸ್ತೆಯಾಗಿದ್ದು, ಮಳೆಗಾಲದಲ್ಲಿ ಕೆಸರುಮಯವಾಗಿ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ದುಸ್ತರವಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ವಾಹನಗಳನ್ನು ಮನೆಗಳವರೆಗೆ ಕೊಂಡೊಯ್ಯುವುದೂ ಕಷ್ಟಕರವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ರಸ್ತೆಯ ಎರಡೂ ಬದಿಗಳಲ್ಲಿ ದಟ್ಟ ಪೊದೆಗಳು ಬೆಳೆದು ರಸ್ತೆಯ ಮೇಲೆಯೇ ವಾಲಿಕೊಂಡಿದ್ದು, ರಾತ್ರಿ ವೇಳೆ ವಿಷಕಾರಿ ಹಾವು ಸೇರಿದಂತೆ ವಿವಿಧ ಜಂತುಗಳ ಸಂಚಾರ ಹೆಚ್ಚಾಗುತ್ತಿದೆ. ಅಲ್ಲದೆ, ಈ ರಸ್ತೆಯಲ್ಲಿ ಬೀದಿ ದೀಪಗಳ ವ್ಯವಸ್ಥೆಯೂ ಇಲ್ಲದಿರುವುದು ಸಾರ್ವಜನಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ರಸ್ತೆಯನ್ನು ಅವಲಂಬಿಸಿರುವ ಬಡ ಕುಟುಂಬಗಳು ಕಳೆದ 30 ವರ್ಷಗಳಿಂದ ರಸ್ತೆ ಅಭಿವೃದ್ಧಿಗಾಗಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿ, ಅಮುಂಜೆ–ಸಾಲ್ಮರ ಸಂಪರ್ಕ ರಸ್ತೆಯನ್ನು ಕಾಂಕ್ರೀಟ್ ಅಥವಾ ಡಾಂಬರೀಕರಣಗೊಳಿಸಿ, ಪೊದೆಗಳನ್ನು ತೆರವುಗೊಳಿಸಿ, ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಹಾಗೂ ಸ್ಥಳೀಯ ನಿವಾಸಿ ರೋಷನ್ ಬಂಗೇರ ಅಮುಂಜೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಆಗ್ರಹಿಸಿದ್ದಾರೆ.

