26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್; ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಹೊಸ ಕಾನೂನು ತರಲು ಕೇಂದ್ರ ಭರವಸೆ

0
27

ನವದೆಹಲಿ : ಲಡಾಖ್‌ನ ಸಾಮಾಜಿಕ ಕಾರ್ಯಕರ್ತ ಹಾಗೂ ಹೋರಾಟಗಾರ ಸೋನಂ ವಾಂಗ್ಚುಕ್ ಅವರು 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಮುಂಜಾನೆ ಅಂತ್ಯಗೊಳಿಸಿದರು. ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಉಪವಾಸವನ್ನು ಕೈಬಿಟ್ಟರು.

ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಿದರು.

ಉಪವಾಸ ಅಂತ್ಯಗೊಳಿಸಿದ ಬಳಿಕ ಮಾತನಾಡಿದ ವಾಂಗ್ಚುಕ್, ಸರ್ಕಾರದೊಂದಿಗೆ ಸುದೀರ್ಘ ಮಾತುಕತೆ ನಡೆದಿದ್ದು, ದೇಶದಲ್ಲಿ ಯಾವುದೇ ರೀತಿಯ ಹಿಂಸಾಚಾರ ಸಂಭವಿಸದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದರು. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಅವರು ಹಂಚಿಕೊಂಡಿರುವ ಸಂದೇಶದಲ್ಲಿ, ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ. ದೇಶದ ಎಲ್ಲರೂ ಶಾಂತಿ ಕಾಪಾಡಿ, ಯಾವುದೇ ರೀತಿಯ ಹಿಂಸಾಚಾರಕ್ಕೆ ಅವಕಾಶ ನೀಡಬಾರದು ಎಂದು ಅವರು ಕರೆ ನೀಡಿದ್ದಾರೆ.

ಇದರ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಸೋನಂ ವಾಂಗ್ಚುಕ್ ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದು, ವೈದ್ಯರ ಸಲಹೆಯಂತೆ ಆರೋಗ್ಯ ಕಾಪಾಡಿಕೊಳ್ಳುವಂತೆ ಹಾಗೂ ಕಳೆದುಕೊಂಡ ತೂಕವನ್ನು ಮರಳಿ ಪಡೆಯುವಂತೆ ಸಂದೇಶ ನೀಡಿದ್ದಾರೆ.

ಇದೇ ವೇಳೆ, ದೇಶದಲ್ಲಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕಾನೂನು ತರಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಹೊಸ ಮಸೂದೆಯಲ್ಲಿ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ, ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ವೇಗಗೊಳಿಸುವಂತಹ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಸೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಮಸೂದೆಯನ್ನು ಶುಕ್ರವಾರದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ.