ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಕ್ರೀಡಾ ಸಂಭ್ರಮ

0
9

ಶಿಸ್ತು, ಸಂಭ್ರಮ ಹಾಗೂ ಕ್ರೀಡಾಸ್ಫೂರ್ತಿಯೊಂದಿಗೆ ಜರುಗಿದ ವಾರ್ಷಿಕ ಕ್ರೀಡಾಕೂಟ

ಬಾರ್ಕೂರು : ಕ್ರೀಡೆಯು ಕೇವಲ ದೈಹಿಕ ಚಟುವಟಿಕೆಯಲ್ಲ; ಅದು ಶಿಸ್ತು, ಆತ್ಮವಿಶ್ವಾಸ, ಛಲ, ಸಹಕಾರ ಹಾಗೂ ಸೋಲು-ಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುವ ಜೀವನಮೌಲ್ಯಗಳನ್ನು ಕಲಿಸುವ ಮಹತ್ವದ ವೇದಿಕೆ. ಇಂತಹ ಕ್ರೀಡಾಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿಪೂರ್ವ ಕಾಲೇಜಿನ ವತಿಯಿಂದ 2026–27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 14ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಅತ್ಯಂತ ಸಂಭ್ರಮ, ಸಡಗರ ಹಾಗೂ ಉತ್ಸಾಹದಿಂದ ಜರುಗಿತು.

ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ತಂಡಗಳ ಶಿಸ್ತುಬದ್ಧ ಹೆಜ್ಜೆ, ಕ್ರೀಡಾ ಧ್ವಜದ ಗೌರವ ಹಾಗೂ ಕ್ರೀಡಾ ಜ್ಯೋತಿಯ ಬೆಳಕಿನೊಂದಿಗೆ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ ದೊರೆಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂತರರಾಷ್ಟ್ರೀಯ ಜಾವೆಲಿನ್ ಎಸೆತದ ಕ್ರೀಡಾಪಟು ಹಾಗೂ ಭಾರತೀಯ ರೈಲ್ವೆಯ ಉದ್ಯೋಗಿ ಕರಿಷ್ಮಾ ಶ್ರೀಕಾಂತ್ ಅವರು ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡೆಯು ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ, ಸಮಯಪ್ರಜ್ಞೆ ಹಾಗೂ ತಂಡಭಾವನೆಯನ್ನು ಬೆಳೆಸುತ್ತದೆ. ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾದ ಕರಿಷ್ಮಾ ಶ್ರೀಕಾಂತ್ ಅವರು ಮಾತನಾಡಿ, ಕ್ರೀಡೆಯು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಆತ್ಮಸ್ಥೈರ್ಯವನ್ನು ನೀಡುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ದೃಢಸಂಕಲ್ಪದೊಂದಿಗೆ ಸಾಧನೆಯ ಶಿಖರವೇರಬೇಕು ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಕೋಶಾಧಿಕಾರಿಗಳಾದ ಭರತ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ಕೋರಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಗೆಲುವಿನಲ್ಲಿ ಅಹಂಕಾರ ಪಡದೆ, ಸೋಲಿನಲ್ಲಿ ಧೃತಿಗೆಡದೆ ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಪ್ರತಿಯೊಂದು ಸ್ಪರ್ಧೆಯೂ ಹೊಸ ಅನುಭವ ಹಾಗೂ ಕಲಿಕೆಯ ಅವಕಾಶವಾಗಬೇಕು ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಕ್ರೀಡಾಕೂಟದ ಉದ್ದೇಶ, ಆಯೋಜನೆ ಹಾಗೂ ವಿವಿಧ ಸ್ಪರ್ಧೆಗಳ ಕುರಿತು ಮಾಹಿತಿ ನೀಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದರು. ಬಾರಕೂರು ಎಜುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ಬಿ. ಶಾಂತರಾಮ್ ಶೆಟ್ಟಿ ಅವರು ಆಗಮಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು.

ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ, ಸಾಮರ್ಥ್ಯ ಹಾಗೂ ಕ್ರೀಡಾ ಕೌಶಲ್ಯವನ್ನು ಪ್ರದರ್ಶಿಸಿದರು. ಮೈದಾನದಲ್ಲಿ ತಂಡಗಳ ನಡುವಿನ ಪೈಪೋಟಿ, ವಿದ್ಯಾರ್ಥಿಗಳ ಹರ್ಷೋದ್ಗಾರ ಹಾಗೂ ಪರಸ್ಪರ ಪ್ರೋತ್ಸಾಹದ ವಾತಾವರಣ ಕ್ರೀಡಾಕೂಟಕ್ಕೆ ವಿಶೇಷ ಮೆರುಗನ್ನು ನೀಡಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಅಶೋಕ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಕೋಶಾಧಿಕಾರಿಗಳಾದ ಭರತ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಸ್ಪರ್ಧಾತ್ಮಕ ಮನೋಭಾವ, ನಾಯಕತ್ವ ಗುಣ ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುವ ಆಶಯದೊಂದಿಗೆ ಆಯೋಜಿಸಲಾದ ಈ ವಾರ್ಷಿಕ ಕ್ರೀಡಾಕೂಟವು ಕೇವಲ ಪದಕ ಮತ್ತು ಬಹುಮಾನಗಳ ಸಂಭ್ರಮಕ್ಕೆ ಸೀಮಿತವಾಗದೆ, ಶಿಸ್ತು, ಸಹಕಾರ, ಪರಿಶ್ರಮ ಹಾಗೂ ಸೌಹಾರ್ದತೆಯ ಮೌಲ್ಯಗಳನ್ನು ಸಾರುವ ಸಾರ್ಥಕ ವೇದಿಕೆಯಾಗಬೇಕು ಎಂದು ಅಶೋಕ್ ಕುಮಾರ್ ಶೆಟ್ಟಿಯವರು ಹೇಳಿದರು. ಇಂದಿನ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣತ್ರ, ಪದಕ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಉಪನ್ಯಾಸಕರಾದ ನೈನಾ ಜೆ ಶೆಟ್ಟಿ ಮತ್ತು ತನುಜಾ ಉಪಾಧ್ಯರವರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಸುಜನ್ ನಾಯಕ್ ರವರು ಸರ್ವರನ್ನು ಸ್ವಾಗತಿಸಿದರು.

ವಿದ್ಯಾರ್ಥಿಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆ, ಶಿಕ್ಷಕರ ಮಾರ್ಗದರ್ಶನ ಹಾಗೂ ಆಡಳಿತ ಮಂಡಳಿಯ ಸಹಕಾರದಿಂದ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.