ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲ ಪಿಂಡಿ ಉತ್ಸವ – ವಾಹನ ಪಾರ್ಕಿಂಗ್ ವ್ಯವಸ್ಥೆ

0
15

ಉಡುಪಿ : ಉಡುಪಿಯಲ್ಲಿ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರ ಹಾಗೂ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಉತ್ಸವ ಸಮಿತಿ ವತಿಯಿಂದ ವಿವಿಧೆಡೆ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಉತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದ್ದು, ಸಂಚಾರ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ 9 ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ನಿಗದಿಪಡಿಸಲಾದ ಪಾರ್ಕಿಂಗ್ ಸ್ಥಳಗಳು:

  1. ಎಂ.ಜಿ.ಎಂ. ಗ್ರೌಂಡ್
  2. ರಾಜಾಂಗಣ ಪಾರ್ಕಿಂಗ್
  3. ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲ್ ಬಳಿ
  4. ಬೀಡಿನಗುಡ್ಡೆ ಮೈದಾನ
  5. ಬೀಡಿನಗುಡ್ಡೆ ಕ್ರೀಡಾಂಗಣ
  6. ವಿದ್ಯೋದಯ ಪಬ್ಲಿಕ್ ಸ್ಕೂಲ್ ಪಾರ್ಕಿಂಗ್
  7. ರಾಜಾಂಗಣ ಪಾರ್ಕಿಂಗ್ ಎದುರಿನ ಖಾಸಗಿ ಜಾಗ
  8. ನಾಗರಾಜ ಬಲ್ಲಾಲ್ ಮನೆಯ ಎದುರು
  9. ಮಾಂಡವಿ ರಾಯಲ್ ಗಾರ್ಡನ್ ಪಾರ್ಕಿಂಗ್

ಉತ್ಸವದ ಸಂದರ್ಭದಲ್ಲಿ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಗದಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲೇ ನಿಲ್ಲಿಸುವಂತೆ ಪೊಲೀಸ್ ಇಲಾಖೆ ಹಾಗೂ ಉತ್ಸವ ಸಮಿತಿ ಮನವಿ ಮಾಡಿದೆ.

ರಸ್ತೆ ಬದಿಯಲ್ಲಿ ಅಥವಾ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸದೆ, ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂಸೇವಕರ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ. ಭಕ್ತರು ಹಾಗೂ ಸಾರ್ವಜನಿಕರ ಸಹಕಾರದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವವನ್ನು ಶಾಂತಿಯುತವಾಗಿ ಹಾಗೂ ಸುಗಮವಾಗಿ ನಡೆಸಲು ಸಾಧ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

“ನಿಮ್ಮ ಸಹಕಾರವೇ ನಮ್ಮ ಬಲ” ಎಂದು ಉತ್ಸವ ಸಮಿತಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ವರದಿ: ವಿನೋದ್ ಶೆಟ್ಟಿ, ಉಡುಪಿ