ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು, ವಿದ್ಯಾಗಿರಿ, ಬಂಟ್ವಾಳ: ವ್ಯಕ್ತಿತ್ವ ವಿಕಸನ ಕುರಿತ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

0
8

ಬಂಟ್ವಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜೊತೆಗೆ ಸಾಫ್ಟ್ ಸ್ಕಿಲ್ಸ್, ಪರಿಣಾಮಕಾರಿಯಾದ ಸಂವಹನ ಕೌಶಲ್ಯ, ನಾಯಕತ್ವ ಗುಣ, ಸಮಯ ನಿರ್ವಹಣೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಾರ್ಥ್ ಶೆಣೈ ಅಭಿಪ್ರಾಯಪಟ್ಟರು.

ಅವರು ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು, ವಿದ್ಯಾಗಿರಿ, ಬಂಟ್ವಾಳದಲ್ಲಿ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಕುರಿತ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಡಿ. ಮಂಚಿಕರೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮುಂದೆ ಬರುವ ಪ್ರತಿಯೊಂದು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಅಧ್ಯಯನದಲ್ಲಿ ತೊಡಗಿಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅಖಿಲಾ ಪೈ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ವಂದಿಸಿದರು. ವೇದಿಕೆಯಲ್ಲಿ ಐ.ಕ್ಯು.ಎ.ಸಿ. ಸಂಯೋಜಕ ಡಾ. ಕಾಶೀನಾಥ ಶಾಸ್ತ್ರಿ ಹೆಚ್.ವಿ. ಉಪಸ್ಥಿತರಿದ್ದರು.

ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದ ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ಹಾಗೂ ಆತ್ಮವಿಶ್ವಾಸ ಮೂಡಿಸುವಲ್ಲಿ ಯಶಸ್ವಿಯಾಯಿತು.